ಬೆಂಗಳೂರು: ನಕಲಿ ಗೌರವ ಡಾಕ್ಟರೇಟ್ ನೀಡಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಯಾವುದೇ ಸಂಸ್ಥೆ ನಕಲಿ ಪದವಿ, ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡುವುದು ಕಂಡು ಬಂದಲ್ಲಿ ಅಂತಹ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.
ನಕಲಿ ಪದವಿ, ಗೌರವ ಡಾಕ್ಟರೇಟ್ ನೀಡುವ ಸಂಸ್ಥೆಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ಕ್ರಮ ಜರುಗಿಸಲಾಗುವುದು. 2021 ಫೆಬ್ರವರಿ 26ರಂದು ಈ ಬಗ್ಗೆ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ 23 ವಿಶ್ವವಿದ್ಯಾಲಯಗಳು ಸರ್ಕಾರಿ ವಿವಿಗಳಿಂದ 1856 ಮಂದಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. 21 ಖಾಸಗಿ ವಿವಿಗಳಲ್ಲಿ 23 ಮಂದಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ವಿಶ್ವವಿದ್ಯಾಲಯಗಳ ಅಧಿನಿಯಮದಲ್ಲಿ ಉಲ್ಲೇಖವಾದ ಮಾನದಂಡದ ಅನ್ವಯ ತೀರ್ಮಾನ ಕೈಗೊಂಡು ರಾಜ್ಯಪಾಲರಿಗೆ ಕಳಿಸಲಿದ್ದು, ಅವರು ನೇಮಿಸುವ ತಜ್ಞರ ಸಮಿತಿ ಪರಿಶೀಲನೆ ಬಳಿಕ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.