
ತೋಟಗಾರಿಕಾ ಇಲಾಖೆಯು ಮಡಿಕೇರಿಯ ರಾಜಾಸೀಟ್ ಉದ್ಯಾನದಲ್ಲಿ ಜನವರಿ 24 ರಿಂದ 27ರವರೆಗೆ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಿದೆ. ವಿವಿಧ ಬಗೆಯ ಹೂಗಳಿಂದ ನಿರ್ಮಾಣಗೊಂಡಿರುವ ಐತಿಹಾಸಿಕ ಓಂಕಾರೇಶ್ವರ ದೇಗುಲದ ಮಾದರಿ ಪ್ರವಾಸಿಗರ ಕಣ್ಮನ ಸೆಳೆಯಲಿದೆ.
ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ನಡೆಯಲಿದೆ.
ಫಲಪುಷ್ಪ ಪ್ರದರ್ಶನದ ಉದ್ಘಾಟನಾ ಸಮಾರಂಭವು ಜನವರಿ 24 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ತೋಟಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಕೊಡಗು ಜಿ.ಪಂ.ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ತೋಟಗಾರಿಕೆ ಇಲಾಖೆ ನಿರ್ದೇಶಕ ಡಿ.ಎಸ್.ರಮೇಶ್ ಮೊದಲಾದವರು ಭಾಗವಹಿಸಲಿದ್ದಾರೆ.