ಬೆಂಗಳೂರು: ಬಜೆಟ್ ನಲ್ಲಿ ಘೋಷಿಸಿದಂತೆ ರಾಜ್ಯಾದ್ಯಂತ 150 ಹಾಸ್ಟೆಲ್ ಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ಸಾಬಣ್ಣ ತಳವಾರ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ 150 ಹಾಸ್ಟೆಲ್ ಗಳನ್ನು ಆರಂಭಿಸಲಾಗುತ್ತದೆ. 75 ಬಾಲಕಿಯರು 75 ಬಾಲಕರು ಸೇರಿ ಒಟ್ಟು 150 ಹಾಸ್ಟೆಲ್ ಗಳನ್ನು ತೆರೆಯಲಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಮೊದಲು ಜಿಲ್ಲಾ ಕೇಂದ್ರಗಳಲ್ಲಿ ಹಾಸ್ಟೆಲ್ ಗಳ ಆರಂಭಿಸುವ ಚಿಂತನೆಯಿತ್ತಾದರೂ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲೂಕು ಮಟ್ಟದಲ್ಲಿಯೂ ಹಾಸ್ಟೆಲ್ ಗಳನ್ನು ಆರಂಭಿಸಲು ಕ್ರಮ ವಹಿಸಲಾಗಿದೆ ಎಂದು ಹೇಳಿದ್ದಾರೆ.
ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ಮೊದಲು ಮೂರು ತಿಂಗಳಿಗೊಮ್ಮೆ ಆಹಾರ ಪದಾರ್ಥಗಳ ಪರೀಕ್ಷೆ ಒಳಪಡಿಸಲಾಗುತ್ತಿತ್ತು. ಇನ್ನು ಮುಂದೆ ಪ್ರತಿ ತಿಂಗಳು ಪರೀಕ್ಷೆಗೆ ಒಳಪಡಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.