ಬೆಂಗಳೂರು: ಗ್ರಾಮೀಣ ವಸತಿ ಯೋಜನೆಯಡಿ 4 ಲಕ್ಷ ಮನೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಬಾಕಿ ಉಳಿದ 1.67 ಲಕ್ಷ ಮನೆಗಳಿಗೆ ಮುಂದಿನ 15 ದಿನಗಳೊಳಗೆ ಜಿಪಿಎಸ್ ಅಪ್ಲೋಡ್ ಮಾಡಬೇಕು, ಆಧಾರ್ ಕಾರ್ಡ್ ಜೋಡಣೆ ಮಾಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹಕಚೇರಿ ‘ಕೃಷ್ಣಾ’ದಲ್ಲಿ ವಸತಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯದಲ್ಲಿ ವಿವಿಧ ಗ್ರಾಮೀಣ ವಸತಿ ಯೋಜನೆಗಳಡಿ 4.09 ಲಕ್ಷ ಮನೆಗಳ ನಿರ್ಮಾಣ ಕಾರ್ಯ ನಡೆದಿದೆ. ಜಿಪಿಎಸ್ ಅಪ್ಲೋಡ್ ಮತ್ತು ಆಧಾರ್ ಕಾರ್ಡ್ ಜೋಡಣೆಗೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆಯಲು ವಸತಿ ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಗರ ಪ್ರದೇಶಗಳಲ್ಲಿ 1.8 ಲಕ್ಷ ಮನೆಗಳ ನಿರ್ಮಾಣ ಕಾಮಗಾರಿ ಆರಂಭಿಸಬೇಕು ಎಂದು ತಿಳಿಸಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ವಸತಿ ಯೋಜನೆಗಳಲ್ಲಿ 5 ಲಕ್ಷ ಮನೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಳ್ಳಲು ಸಿದ್ಧತೆ ಕೈಗೊಳ್ಳಬೇಕು. ಇದರೊಂದಿಗೆ ಪ್ರವಾಹ ಸಂದರ್ಭದಲ್ಲಿ ಮನೆ ಹಾನಿಗೆ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ. ವಸತಿ ಸಚಿವ ಸೋಮಣ್ಣ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು.