ಬೆಂಗಳೂರು: ಕಾಲಮಿತಿಯೊಳಗೆ ವಸತಿ ಯೋಜನೆ ಪೂರ್ಣಗೊಳಿಸಲು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತೀರ್ಮಾನಿಸಿದ್ದಾರೆ.
ಮಂಗಳವಾರ ಇಬ್ಬರು ಸಚಿವರು ಹಾಗೂ 15 ಶಾಸಕರೊಂದಿಗೆ ವಿಧಾನಸಭಾ ಕ್ಷೇತ್ರವಾರು ಸಭೆ ನಡೆಸಿದ್ದಾರೆ. ವಸತಿ ಇಲಾಖೆ ವ್ಯಾಪ್ತಿಯ ಗೃಹ ಮಂಡಳಿ, ಕೊಳಗೇರಿ ಅಭಿವೃದ್ಧಿ ಮಂಡಳಿ, ರಾಜೀವ್ ಗಾಂಧಿ ವಸತಿ ನಿಗಮಗಳಿಂದ ಪ್ರತಿ ಕ್ಷೇತ್ರಗಳಲ್ಲಿ ಅನುಷ್ಠಾನದಲ್ಲಿರುವ ವಸತಿ ಯೋಜನೆಗಳ ಬಗ್ಗೆ ಶಾಸಕರ ಸಮ್ಮುಖದಲ್ಲಿಯೇ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.
ಕಾಲಮಿತಿಯೊಳಗೆ ಮನೆ ನಿರ್ಮಾಣ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರ ಮಾಡುವಂತೆ ಸಚಿವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ಪ್ರಧಾನಮಂತ್ರಿ ಗ್ರಾಮೀಣ ಆವಾಸ್ ಯೋಜನೆ ಅಡಿ ಪ್ರತಿ ಜಿಲ್ಲೆ ಮತ್ತು ವಿಧಾನಸಭಾ ಕ್ಷೇತ್ರವಾರು ಹಂಚಿಕೆಯಾದ ಮನೆ ಮತ್ತು ಬಾಕಿ ಉಳಿದ ಮನೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದು ಗ್ರಾಮ ಸಭೆ ಮೂಲಕ ಫಲಾನುಭವಿಗಳ ಪಟ್ಟಿ ಆಯ್ಕೆ ಮಾಡಲು ಸೂಚಿಸಿದ್ದಾರೆ.
1.41 ಲಕ್ಷ ಮನೆಗಳಲ್ಲಿ 71,000 ಫಲಾನುಭವಿಗಳ ಪಟ್ಟಿ ಇನ್ನೂ ಸಿದ್ಧವಾಗಿಲ್ಲ. ಈ ಹಿನ್ನೆಲೆಯಲ್ಲಿ ಕೂಡಲೇ ಪಟ್ಟಿ ಕಳುಹಿಸಲು ತಿಳಿಸಿದ್ದಾರೆ. ಸಬ್ಸಿಡಿ ಮೊತ್ತ ಹೆಚ್ಚಳ ಮಾಡುವಂತೆ ಶಾಸಕರು ಮನವಿ ಮಾಡಿದ್ದು, ಈ ಬಗ್ಗೆ ಸಿಎಂ ಗಮನಕ್ಕೆ ತರುವುದಾಗಿ ಸಚಿವ ಜಮೀರ್ ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆ ಈ ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳಲಿದ್ದು, ಚುನಾವಣೆ ಮೊದಲಾದ ಕಾರಣಗಳಿಂದ ಫಲಾನುಭವಿಗಳ ಆಯ್ಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಮೂರ್ನಾಲ್ಕು ತಿಂಗಳು ಕಾಲಾವಕಾಶ ವಿಸ್ತರಿಸಲು ಕೇಂದ್ರಕ್ಕೆ ಮನವಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.