
ನವದೆಹಲಿ: ದೇಶದಲ್ಲಿ ಕೊರೋನಾ ಪರಿಸ್ಥಿತಿ ಗಂಭೀರವಾಗಿದ್ದು, 10 ಜಿಲ್ಲೆಗಳಲ್ಲಿ ತೀರಾ ಹದಗೆಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದೆ.
ಸೋಂಕು ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ನಗರ ಸೇರಿದಂತೆ ದೇಶದ 10 ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ಅತಿ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿದೆ ಎಂದು ಆರೋಗ್ಯ ಮಂತ್ರಾಲಯ ತಿಳಿಸಿದೆ.
ಪುಣೆ, ಮುಂಬೈ, ನಾಗಪುರ, ಥಾಣೆ, ನಾಸಿಕ್, ಔರಂಗಬಾದ್, ಬೆಂಗಳೂರು ನಗರ, ನಾಂದೇಡ್, ದೆಹಲಿ, ಅಹ್ಮದ್ ನಗರ ಜಿಲ್ಲೆಗಳಲ್ಲಿ ಕೊರೋನಾ ಸೋಂಕು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.
ಕೊರೋನಾ ಸೋಂಕು ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಸೋಂಕು ಹರಡುವುದನ್ನು ತಡೆಯಲು ಟೆಸ್ಟ್ ಗಳನ್ನು ಹೆಚ್ಚಿಸಬೇಕು ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಕೆಲವು ಜಿಲ್ಲೆಗಳಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ದೇಶ ಅಪಾಯಕ್ಕೆ ಸಿಲುಕಿದೆ. ಸೋಂಕು ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಪೌಲ್ ಹೇಳಿದ್ದಾರೆ.