ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಗೆ ಭಾರೀ ಬೇಡಿಕೆ ವ್ಯಕ್ತವಾಗಿದೆ. ಶಾಲೆಯ ಪ್ರವೇಶ ಪರೀಕ್ಷೆಗೆ ಬರೋಬ್ಬರಿ 20,134 ಅರ್ಜಿಗಳು ಸಲ್ಲಿಕೆಯಾಗಿವೆ.
ಪ್ರವೇಶ ಪರೀಕ್ಷೆಯು ವಿದ್ಯಾಗಿರಿ ಮತ್ತು ಪುತ್ತಿಗೆ ಶಾಲಾ ಆವರಣ ಸೇರಿದಂತೆ ಒಟ್ಟು 5 ಕೇಂದ್ರಗಳಲ್ಲಿ ನಡೆಯಲಿದೆ. ಎರಡೂವರೆ ಗಂಟೆಗಳ ಕಾಲ ನಡೆಯುವ ಪರೀಕ್ಷೆಯು 150 ಅಂಕಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ 6 ರಿಂದ 10 ನೇ ತರಗತಿಯವರೆಗೆ ಉಚಿತ ಶಿಕ್ಷಣ, ಊಟ, ವಸತಿ ಮತ್ತು ಇತರ ಸೌಲಭ್ಯಗಳನ್ನು ನೀಡಲಾಗುವುದು ಎಂದು ಸಂಸ್ಥೆ ತಿಳಿಸಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ. ಮೋಹನ್ ಆಳ್ವ, “ಸರ್ಕಾರದ ಅನೇಕ ಕನ್ನಡ ಮಾಧ್ಯಮ ಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಅಥವಾ ವಿಲೀನವಾಗುವ ಸ್ಥಿತಿಯಲ್ಲಿವೆ. ಆದರೆ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಗೆ ಬಂದಿರುವ ಅರ್ಜಿಗಳ ಸಂಖ್ಯೆ ಗಮನಿಸಿದರೆ, ಗುಣಮಟ್ಟದ ಶಿಕ್ಷಣ ನೀಡಿದರೆ ಕನ್ನಡ ಮಾಧ್ಯಮಕ್ಕೂ ವಿದ್ಯಾರ್ಥಿಗಳ ಕೊರತೆಯಾಗುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ” ಎಂದು ಹೇಳಿದರು.