ನವದೆಹಲಿ: ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ದೇಶಾದ್ಯಂತದ ಸರ್ಕಾರಿ ನೌಕರರು ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಹಳೆಯ ಪಿಂಚಣಿ ಯೋಜನೆ ರಾಷ್ಟ್ರೀಯ ಆಂದೋಲನದ(ಎನ್‌ಎಂಒಪಿಎಸ್) ಮುಖಂಡ ವಿಜಯ್ ಕುಮಾರ್ ಬಂಧು ಮಾತನಾಡಿ, ಕೇಂದ್ರ ಸರ್ಕಾರ ಒಪಿಎಸ್ ಅನುಮೋದಿಸಿದರೆ, ಅದರ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿರುವುದಿಲ್ಲ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಹಳೆಯ ಪಿಂಚಣಿ ಯೋಜನೆಯನ್ನು(OPS) ಮರುಸ್ಥಾಪಿಸದಿದ್ದರೆ, ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ‘ವೋಟ್ ಫಾರ್ OPS’ ಅಭಿಯಾನ ಆಯೋಜಿಸುವುದಾಗಿ ಹೇಳಲಾಗಿದೆ.
ಕಾಂಗ್ರೆಸ್ ನಾಯಕ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್, ಬಹುಜನ ಸಮಾಜ ಪಕ್ಷದ ಸಂಸದ ಶ್ಯಾಮ್ ಸಿಂಗ್ ಯಾದವ್ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರತಿಭಟನಾಕಾರರನ್ನು ಬೆಂಬಲಿಸಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿಗೆ ತರಲು ನಗರ ಸರ್ಕಾರ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವೂ ಪ್ರತಿಭಟನಾಕಾರರನ್ನು ಬೆಂಬಲಿಸಿ, ‘ಹಳೆಯ ಪಿಂಚಣಿ ನೌಕರರ ಹಕ್ಕು’ ಎಂದು ಹೇಳಿದೆ. ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವಂತೆ ಪಕ್ಷವು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಒತ್ತಾಯಿಸಿತು.
ಐದು ರಾಜ್ಯಗಳು ಹಳೆಯ ಪಿಂಚಣಿ ಯೋಜನೆಗೆ ಮರಳಿವೆ. ರಾಜಸ್ಥಾನ, ಛತ್ತೀಸ್‌ಗಢ, ಜಾರ್ಖಂಡ್, ಪಂಜಾಬ್ ಮತ್ತು ಹಿಮಾಚಲ ಪ್ರದೇಶ ಒಪಿಎಸ್ ಮರು ಜಾರಿಗೊಳಿಸಿದ್ದು, ಪಶ್ಚಿಮ ಬಂಗಾಳ ಎಂದಿಗೂ ಹೊಸ ಪಿಂಚಣಿ ಯೋಜನೆ ಆರಿಸಿಕೊಂಡಿಲ್ಲ.