ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ ಜನಾರ್ದನ ರೆಡ್ಡಿ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರನ್ನು ಒತ್ತಾಯಿಸಿದ್ದೇನೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಗುರುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ದೆಹಲಿ ಭೇಟಿಯ ಸಂದರ್ಭದಲ್ಲಿ ಜನಾರ್ದನ ರೆಡ್ಡಿ ಅವರನ್ನು ಮತ್ತೆ ಸೇರಿಸಿಕೊಳ್ಳುವ ಬಗ್ಗೆ ಅಮಿತ್ ಶಾ ನನ್ನ ಅಭಿಪ್ರಾಯವನ್ನು ಕೇಳಿದರು. ರೆಡ್ಡಿ ಅವರಿಗೆ ಈ ಪ್ರದೇಶದಲ್ಲಿ ಸ್ವಲ್ಪ ಪ್ರಭಾವವಿದೆ ಮತ್ತು ಅವರನ್ನು ಪಕ್ಷಕ್ಕೆ ಮರಳಿ ಕರೆತಂದರೆ ಬಿಜೆಪಿಗೆ ಲಾಭವಾಗಲಿದೆ ಎಂದು ನಾನು ಅವರಿಗೆ ಹೇಳಿದ್ದೇನೆ. ಎಂದರು.
ಜನಾರ್ದನ ರೆಡ್ಡಿ ಮತ್ತು ನನ್ನ ನಡುವೆ ಕೆಲವು ಭಿನ್ನಾಭಿಪ್ರಾಯಗಳಿರಬಹುದು. ಆದರೆ ಅವರು ಪಕ್ಷಕ್ಕೆ ಸೇರಿದರೆ ಬಿಜೆಪಿಗೆ ಲಾಭವಾಗಲಿದೆ ಎಂದು ಶ್ರೀರಾಮುಲು ಹೇಳಿದರು.
ರಾಜ್ಯಸಭಾ ಚುನಾವಣೆಯಲ್ಲಿ ರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶ್ರೀರಾಮುಲು, ಅದು ಅವರ ಪಕ್ಷದ ನಿರ್ಧಾರ ಮತ್ತು ಅದರ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.