
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ I.N.D.I.A ಮೈತ್ರಿಕೂಟದ ಜೊತೆ ಸೀಟು ಹೊಂದಾಣಿಕೆ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣ ಮೂಲ ಕಾಂಗ್ರೆಸ್, ಒಂದೊಮ್ಮೆ I.N.D.I.A ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸರ್ಕಾರದ ಭಾಗವಾಗದೆ ಬಾಹ್ಯ ಬೆಂಬಲ ನೀಡುವುದಾಗಿ ಹೇಳಿತ್ತು.
ಆದರೆ ಈ ಕುರಿತ ಮಾಹಿತಿ ಹೊರಬಿದ್ದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಯು ಟರ್ನ್ ಹೊಡೆದಿದ್ದಾರೆ. I.N.D.I.A ಮೈತ್ರಿಕೂಟ ರಚಿಸುವಲ್ಲಿ ನಾನೂ ಕೂಡ ಪ್ರಮುಖ ಪಾತ್ರ ವಹಿಸಿದ್ದೇನೆ. ಹಾಗಾಗಿ ಲೋಕಸಭಾ ಚುನಾವಣೆಯಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧಿಸಿದ್ದರೂ ಸಹ ಈಗಲೂ I.N.D.I.A ಕೂಟದ ಭಾಗವಾಗಿದ್ದೇವೆ ಎಂದು ಅವರು ಹೇಳಿದ್ದಾರೆ.
ಈ ಮಧ್ಯೆ I.N.D.I.A ಮೈತ್ರಿ ಕೂಟ ಅಧಿಕಾರಕ್ಕೆ ಬರಬಹುದು ಎಂಬ ಕಾರಣಕ್ಕೆ ಮಮತಾ ಬ್ಯಾನರ್ಜಿ ಈ ತೀರ್ಮಾನ ಕೈಗೊಂಡಿರಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಒಂದೊಮ್ಮೆ I.N.D.I.A ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ತಾವೂ ಕೂಡ ಪ್ರಧಾನಿ ಹುದ್ದೆಯ ಆಕಾಂಕ್ಷಿ ಎಂಬುದನ್ನು ಈ ಹೇಳಿಕೆ ಮೂಲಕ ಮಮತಾ ಬ್ಯಾನರ್ಜಿ ರವಾನಿಸಿದ್ದಾರೆ ಎಂಬ ವ್ಯಾಖ್ಯಾನ ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.