
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ ರಾಜ್ಯದಲ್ಲಿ ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಮಂಜುನಾಥ ಪ್ರಸಾದ್ ಅವರನ್ನು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿದ್ದು, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ.
ತುಷಾರ್ ಗಿರಿನಾಥ್ ಅವರನ್ನು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿದ್ದು, ಇದರೊಂದಿಗೆ ವಿಪತ್ತು ನಿರ್ವಹಣೆ ಮತ್ತು ಭೂಮಿ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
ರಾಜಕುಮಾರ ಖತ್ರಿ ಅವರಿಗೆ ಕೃಷಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಜಾವೇದ್ ಅಖ್ತರ್ ಅವರನ್ನು ಅರಣ್ಯ ಮತ್ತು ಪರಿಸರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇದರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.
ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿದ್ದ ರಮಣ ರೆಡ್ಡಿ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ, ಐಟಿ-ಬಿಟಿ ಇಲಾಖೆ ಜವಾಬ್ದಾರಿಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.