ಲೈಂಗಿಕ ಕಿರುಕುಳದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಎಸ್ಐಟಿಯಿಂದ ಬಂಧನಕ್ಕೊಳಗಾಗಿರುವ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್ ಡಿ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ನಡೆಸಿದ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದ್ದಾರೆ.
ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಧೀಶರ ಮುಂದೆ ತಮ್ಮ ಅಳಲು ತೋಡಿಕೊಂಡ ರೇವಣ್ಣ, ತಾವು ಹೊಟ್ಟೆ ನೋವಿನಿಂದ ಬಳಲುತ್ತಿದ್ದರೂ ಸಹ ಎಸ್ಐಟಿ ವಿಚಾರಣೆಗೆ ಸಹಕರಿಸಿದ್ದೇನೆ. ನಾನು ಅನಾರೋಗ್ಯಕ್ಕೊಳಗಾಗಿದ್ದರೂ ಎಸ್ಐಟಿ ಅಧಿಕಾರಿಗಳು ಆಸ್ಪತ್ರೆಗೆ ಕರೆದೊಯ್ಯಲಿಲ್ಲ ಎಂದು ಆರೋಪಿಸಿದರು.
ಅಂತಿಮವಾಗಿ ರೇವಣ್ಣ ಅವರಿಗೆ ಮೇ 14 ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದ್ದು, ಎಸ್ಐಟಿ ಅಧಿಕಾರಿಗಳು ಅವರನ್ನು ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯುತ್ತಿದ್ದಾರೆ. ನ್ಯಾಯಾಲಯದಿಂದ ಹೊರಬರುವ ವೇಳೆ ಎಚ್ ಡಿ ರೇವಣ್ಣ ಕಣ್ಣೀರಿಟ್ಟಿದ್ದು, ಈ ಸಂದರ್ಭದಲ್ಲಿ ನ್ಯಾಯಾಲಯದ ಸಿಬ್ಬಂದಿ ಸೇರಿದಂತೆ ಅನೇಕರು ನೆರೆದಿದ್ದರು.