ಬೆಂಗಳೂರು : ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಟಿಕೆಟ್ ಸಿಗದ ಕೆಲವು ಅಸಮಾಧಾನಿತರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಜಂಪ್ ಆಗುತ್ತಿದ್ದಾರೆ.
ಕಾಂಗ್ರೆಸ್ ಹಾಗೂ ಬಿಜೆಪಿ ಪಾಳಯದಲ್ಲಿ ಕೂಡ ಪಕ್ಷಾಂತರ ಪರ್ವ ಶುರುವಾಗಿದ್ದು, ಇಂದು ಹಲವರು ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರು ಪಕ್ಷ ತೊರೆದಿದ್ದಾರೆ.
ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮುಖಂಡರಿಗೆ ಟಾಸ್ಕ್ ನೀಡಿದ್ದಾರೆ. ಆಪರೇಷನ್ ಗೆ ಅವಕಾಶ ಸಿಕ್ಕರೆ ಮಾಡಿ ಎಂದು ಕೈ ಮುಖಂಡರಿಗೆ ಸಿಎಂ, ಡಿಸಿಎಂ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಎರಡನೇ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳ ಮುಖಂಡರುಗಳು ಮತ್ತು ಪ್ರಭಾವಿಗಳ ಸಭೆಯಲ್ಲಿ ಭಾಗವಹಿಸಿದ ಸಿದ್ದರಾಮಯ್ಯ ಚುನಾವಣೆಯ ಸಿದ್ಧತೆಗಳ ಬಗ್ಗೆ ಚರ್ಚಿಸಿದರು. ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಕೋಟ್ಯಂತರ ಜನರ ಬದುಕು ಬದಲಿಸಿದ್ದು ಅದನ್ನು ಫಲಾನುಭವಿಗಳಿಗೆ ಮನವರಿಕೆ ಮಾಡಿಕೊಟ್ಟು ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವ ಕಡೆಗೆ ಶ್ರಮ ಹಾಕುವಂತೆ ಕರೆ ನೀಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.