ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಅಕ್ರಮ ಮರಳು ದಂಧೆ ತಡೆಯಲು ಮುಂದಾದ ಮಹಿಳಾ ಅಧಿಕಾರಿಯೊಬ್ಬರಿಗೆ ಶಾಸಕರ ಪುತ್ರನಿಂದ ಅವಾಚ್ಯ ನಿಂದನೆ ಎದುರಾಗಿದೆ. ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಅವರ ಪುತ್ರ ಬಸವೇಶ್, ಮಹಿಳಾ ಅಧಿಕಾರಿಯನ್ನು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಭದ್ರಾವತಿ ಬಳಿಯ ಭದ್ರಾ ನದಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಗಣಿ ಇಲಾಖೆಯ ವಿಜ್ಞಾನಿ ಜ್ಯೋತಿ ಅವರು ಮಧ್ಯರಾತ್ರಿ ದಾಳಿ ನಡೆಸಿದ್ದರು. ಈ ವೇಳೆ ಶಾಸಕರ ಪುತ್ರ ಮೊಬೈಲ್ ನಲ್ಲಿ, ಜ್ಯೋತಿ ಅವರನ್ನು ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದ ತೀವ್ರ ಟೀಕೆಗೆ ಗುರಿಯಾಗಿದೆ.
ಈ ಘಟನೆಯನ್ನು ಖಂಡಿಸಿರುವ ಜೆಡಿಎಸ್ ಮತ್ತು ಬಿಜೆಪಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. “ಕಾಂಗ್ರೆಸ್ ಸರ್ಕಾರದಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆಯೇ ಇಲ್ಲವಾಗಿದೆ” ಎಂದು ಜೆಡಿಎಸ್ ಟೀಕಿಸಿದೆ. “ಮಹಿಳೆಯರಿಗೆ ರಕ್ಷಣೆಯಿಲ್ಲ, ಗೌರವವಿಲ್ಲ” ಎಂದು ಬಿಜೆಪಿ ಆರೋಪಿಸಿದೆ.
“ಭದ್ರಾವತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದೆ. ಇದನ್ನು ತಡೆಯಲು ಬಂದ ಮಹಿಳಾ ಅಧಿಕಾರಿಗೆ ಶಾಸಕರ ಪುತ್ರ ಅವಾಚ್ಯವಾಗಿ ನಿಂದಿಸಿದ್ದಾರೆ. ಈ ಕೂಡಲೇ ಆರೋಪಿಯನ್ನು ಬಂಧಿಸಬೇಕು” ಎಂದು ಜೆಡಿಎಸ್ ಆಗ್ರಹಿಸಿದೆ.
“ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ, ಮಹಿಳಾ ಅಧಿಕಾರಿಗಳನ್ನು ನಿಂದಿಸುವುದು ನಿಮ್ಮ ಕಾಂಗ್ರೆಸ್ ಸಂಸ್ಕೃತಿಯೇ ? ಶಾಸಕರ ಪುತ್ರನನ್ನು ಬಂಧಿಸಿ, ಗಡಿಪಾರು ಮಾಡಿ” ಎಂದು ಬಿಜೆಪಿ ಒತ್ತಾಯಿಸಿದೆ.
ಈ ಘಟನೆಗೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ʼ @INCKarnataka ಸರ್ಕಾರದಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆಯೇ ಇಲ್ಲವಾಗಿದೆ !
ಭದ್ರಾವತಿಯಲ್ಲಿ ಒಂದು ಪೈಸೆ ಅಭಿವೃದ್ಧಿ ಕೆಲಸ ಮಾಡದ ನಾಲಾಯಕ್ ಕಾಂಗ್ರೆಸ್ ಶಾಸಕ ಸಂಗಮೇಶ್ ಹಾಗೂ ಅವರ ಮಗ ಬಿ.ಎಸ್. ಬಸವೇಶ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ, ಗೂಂಡಾಗಿರಿ ಮಾಡಿಕೊಂಡು ಲೂಟಿ ಹೊಡೆಯುತ್ತಿದ್ದಾರೆ.
ಅಕ್ರಮ… pic.twitter.com/XDbJT0nIYD
— Janata Dal Secular (@JanataDal_S) February 10, 2025