ಕಲಬುರಗಿ : ಶಕ್ತಿ ಯೋಜನೆಯಿಂದ ಮಹಿಳೆಯರು ಸಂತುಷ್ಟಗೊಂಡಿದ್ದಾರೆ, ಆಗಸ್ಟ್ 24ಕ್ಕೆ ಗೃಹ ಲಕ್ಷ್ಮೀಗೆ ಚಾಲನೆ ನೀಡಲಾಗುತ್ತದೆ. ಡಿಸೆಂಬರ್ ನಲ್ಲಿ ಯುವನಿಧಿ ಜಾರಿಗೊಳಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಶನಿವಾರ ಕಲಬುರಗಿ ನಗರದ ಎನ್.ವಿ.ಮೈದಾನದಲ್ಲಿ ಇಂಧನ ಇಲಾಖೆ ಆಯೋಜಿಸಿದ ಪಂಚ ಗ್ಯಾರಂಟಿಯಲ್ಲಿ ಒಂದಾದ ಗರಿಷ್ಠ 200 ಯೂನಿಟ್ ಉಚಿತವಾಗಿ ಒದಗಿಸುವ ಉಚಿತ ಬೆಳಕು, ಸುಸ್ಥಿರ ಬದುಕು ಎಂಬ ಧ್ಯೇಯವಾಕ್ಯದ “ಗೃಹ ಜ್ಯೋತಿ” ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ 10 ಜನರಿಗೆ ಶೂನ್ಯ ದರದ ವಿದ್ಯುತ್ ಬಿಲ್ ನೀಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಚಿವ ಸಂಪುಟ ತೀರ್ಮಾನ ಕೈಗೊಂಡಿತ್ತು. ಅದಂತೆ ಜೂನ್ 11 ರಂದು ‘ಶಕ್ತಿ’ ಯೋಜನೆ ಜಾರಿಗೊಳಿಸಿದೆ. ಪ್ರತಿ ದಿನ ಸುಮಾರು 55 ಲಕ್ಷ ಇದುವರೆಗೂ 30 ಕೋಟಿಗೂ ಹೆಚ್ಚು ಜನ ಮಹಿಳೆಯರು ಉಚಿತ ಪ್ರಯಾಣದ ಲಾಭ ಪಡೆದಿದ್ದು, ಯೋಜನೆಯಿಂದ ರಾಜ್ಯದ ಮಹಿಳೆಯರು ಸಂತುಷ್ಟರಾಗಿದ್ದಾರೆ. ಬಡತನ ಹಿಂಸೆಯ ಅತಿ ಕೆಟ್ಟ ರೂಪ ಎಂದು ಮಹಾತ್ಮಾ ಗಾಂಧಿ ಹೇಳಿದ್ದಾರೆ. ಹಸಿವು ಮುಕ್ತ ಕರ್ನಾಟಕ್ಕಾಗಿ “ಅನ್ನ ಭಾಗ್ಯ” ಯೋಜನೆಯಡಿ 10 ಕೆ.ಜಿ. ಆಹಾರ ಧಾನ್ಯ ನೀಡಲು ಘೋಷಿಸಲಾಗಿತ್ತು. ಅಕ್ಕಿ ನೀಡಲು ಕೇಂದ್ರ ಸರ್ಕಾರ ಸಹಕರಿಸದ ಕಾರಣ, 5 ಕೆ.ಜಿ ಅಕ್ಕಿಯ ಬದಲು ತಲಾ 170 ರೂ. ಗಳನ್ನು 1.30 ಲಕ್ಷ ಕುಟಟುಂಬಕ್ಕೆ ಡಿ.ಬಿ.ಟಿ. ಮೂಲಕ ನೀಡಲಾಗುತ್ತಿದೆ. “ಗೃಹ ಜ್ಯೋತಿ” ಕಾರ್ಯಕ್ರಮದಡಿ 2.14 ಕೋಟಿ ಜನ ಲಾಭ ಪಡೆಯಲಿದ್ದು, 1.41 ಕೋಟಿ ಜನರ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಡಿಸೆಂಬರ್-ಜನವರಿಯಲ್ಲಿ ನಿರುದ್ಯೋಗಿಳಗೆ ಕ್ರಮವಾಗಿ 1,500 ಮತ್ತು 3,000 ಭತ್ಯೆ ನೀಡುವ “ಯುವ ನಿಧಿ” ಯೋಜನೆ ಸಹ ಜಾರಿಗೊಳಿಸಲಾಗುವುದು ಎಂದು ಸಿ.ಎಂ. ಸಿದ್ದರಾಮಯ್ಯ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ತಿಳಿಸಿದರು.