ಕರಕುಶಲ ವೃತ್ತಿ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಬಂಪರ್ ಸುದ್ದಿಯೊಂದನ್ನು ನೀಡಿದೆ. ಪ್ರಸ್ತುತ ನೀಡುತ್ತಿರುವ ಶಿಷ್ಯ ವೇತನ 750 ರೂಪಾಯಿಗಳಿಂದ 1500 ರೂಪಾಯಿಗಳಿಗೆ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ.
ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂ ಟಿ ಬಿ ನಾಗರಾಜ್ ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರದಂದು ಸಾಗರದ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ‘ಶಿಲ್ಪ’ ಗುರುಕುಲದಲ್ಲಿ ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಈ ಮಾಹಿತಿ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಸಚಿವರು, ಉತ್ತರ ಕರ್ನಾಟಕ ಭಾಗದಲ್ಲಿ ಶಿಲ್ಪ ಮತ್ತು ಮರ ಕೆತ್ತನೆಗೆ ಸಂಬಂಧಿಸಿದಂತೆ ಮತ್ತೊಂದು ತರಬೇತಿ ಕೇಂದ್ರ ಸ್ಥಾಪನೆಗೆ ನಿರ್ಧರಿಸಲಾಗಿದೆ. ಹೆಣ್ಣು ಮಕ್ಕಳೂ ಸಹ ಇದರ ತರಬೇತಿ ಪಡೆಯಲು ಪ್ರೋತ್ಸಾಹ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.