ಬೆಂಗಳೂರು : ಇಂದು ದೇಶಾದ್ಯಂತ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಇಂದು ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಲಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸುಮಾರು 1,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆ ಕಾರ್ಯಕ್ಕೆ ನಿಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಪ್ರತಿಯೊಬ್ಬರು ಪಾಸು ಮತ್ತು ಗುರುತಿನ ಚೀಟಿಯನ್ನು ಹೊಂದಿರಬೇಕು. ಪರ್ಸ್ ಮತ್ತು ಮೊಬೈಲ್ ಹೊರತುಪಡಿಸಿ ಬೇರೆ ಯಾವುದೇ ವಸ್ತುಗಳನ್ನು ಕಾರ್ಯಕ್ರಮಕ್ಕೆ ತರದಂತೆ ನಿಷೇಧಿಸಲಾಗಿದೆ.
ಈ ಬಾರಿ ಸ್ವಾತಂತ್ರ್ಯೋತ್ಸವ ಪರೇಡ್‌ನಲ್ಲಿ ಒಟ್ಟು 38 ತುಕಡಿಗಳಿಂದ ಸುಮಾರು 1,350 ಮಂದಿ ಭಾಗಿಯಾಗಲಿದ್ದು, ಈ ಬಾರಿ ಗೋವಾ ಪೊಲೀಸರ ವಿಶೇಷ ತಂಡ ಕೂಡ ಪರೇಡ್‌ನಲ್ಲಿ ಭಾಗಿಯಾಗಲಿದೆ. ವಿವಿಧ ಶಾಲೆಗಳ ಮಕ್ಕಳು ಸಾಂಸ್ಕೃತಿಕ ಕಾರ್ಯಗಳನ್ನ ನಡೆಸಿಕೊಡಲಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿ ನಗರ ಬಸ್ ನಿಲ್ದಾಣವರೆಗೆ, ಕಬ್ಬನ್ ರಸ್ತೆ, ಸಿಟಿಒ ವೃತ್ತ, ಕೆಆರ್ ರಸ್ತೆ, ಎಂಜಿ ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ರಸ್ತೆವರೆಗೆ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.