ರಾಜ್ಯದಲ್ಲಿ ಕೊರೊನಾ ಆರ್ಭಟಿಸುತ್ತಿರುವ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಈ ವರ್ಷದ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರವೂ ಕೂಡ ಶೀಘ್ರದಲ್ಲೇ ಗಣೇಶೋತ್ಸವ ಆಚರಣೆ ಕುರಿತಂತೆ ಮಾರ್ಗಸೂಚಿಗಳನ್ನು ಪ್ರಕಟಿಸುವ ಸಾಧ್ಯತೆ ಇದೆ.
ಇದರ ಮಧ್ಯೆ ಕಲಬುರ್ಗಿ ಜಿಲ್ಲೆ ಅಫಜಲ್ಪುರ ತಾಲೂಕಿನ ದೇವಲ ಗಾಣಗಾಪುರ ಸಂಗಮ ಕ್ಷೇತ್ರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಸರ್ಕಾರ ನಿಯಮ ಬಿಡುಗಡೆ ಮಾಡಲಿ – ಬಿಡಲಿ ರಾಜ್ಯಾದ್ಯಂತ ನಿಯಮಾನುಸಾರ ಸಾರ್ವಜನಿಕವಾಗಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಸಿದ್ಧ ಎಂದು ಘೋಷಿಸಿದ್ದಾರೆ.
ಲಾಕ್ಡೌನ್ ಸಡಿಲಿಕೆ ಬಳಿಕ ಸರ್ಕಾರ, ದೇವಸ್ಥಾನ, ಬಾರ್, ಮಾಲ್ ಸೇರಿದಂತೆ ಬಹುತೇಕ ಎಲ್ಲವನ್ನು ತೆರೆಯಲು ಅವಕಾಶ ಕಲ್ಪಿಸಿಕೊಟ್ಟಿದೆ. ಆದರೆ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ಮೀನಾಮೇಷ ಎಣಿಸುತ್ತಿರುವುದು ಏಕೆ ಎಂದು ಪ್ರಶ್ನಿಸಿದ ಪ್ರಮೋದ್ ಮುತಾಲಿಕ್, ಇದನ್ನು ಶ್ರೀರಾಮ ಸೇನೆ ಖಂಡಿಸುತ್ತದೆ ಎಂದು ಹೇಳಿದ್ದಾರೆ.