ನವದೆಹಲಿ: ಕೊರೊನಾ ಮಹಾಮಾರಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಲಸಿಕೆ ಲಭ್ಯವಾಗಲಿದೆ ಎಂಬ ಮಾಹಿತಿ ಬಹಿರಂಗವಾಗಿದೆ. ಇದರ ಬೆನ್ನಲ್ಲೇ ಇದೀಗ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಕಡಿಮೆಯಾಗಿದೆ.
ಆದರೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಏರಿಕೆಯಾಗಿದ್ದು, 43,893 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅಂದರೆ ಮೊನ್ನೆಗಿಂತ ಕೊಂಚ ಹೆಚ್ಚಿನ ಜನರಲ್ಲಿ (ಮೊನ್ನೆ 36,469 ಜನರಲ್ಲಿ ಸೋಂಕು ಪತ್ತೆ) ವೈರಸ್ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 79,90,322ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 508 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,20,010ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 6,10,803 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಯಲ್ಲಿ 58,439 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ದೇಶದಲ್ಲಿ 72,59,509 ಸೋಂಕಿತರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.