ನವದೆಹಲಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ಗಾಂಧಿ ರಾಜೀನಾಮೆ ಸುಳಿವು ನೀಡುತ್ತಿದ್ದಂತೆಯೇ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಕಾಂಗ್ರೆಸ್ ಹಿರಿಯ ನಾಯಕರ ಪತ್ರಕ್ಕೆ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ ಜತೆಗಿನ ಒಳ ಒಪ್ಪಂದ ಎಂದು ಕಿಡಿಕಾರಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡುವಂತೆ ಸೋನಿಯಾ ಗಾಂಧಿ ಸೂಚಿಸಿದ ಬೆನ್ನಲ್ಲೇ ಮಾತನಾಡಿದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಅವರು ಆಸ್ಪತ್ರೆಗೆ ದಾಖಲಾಗಿದ್ದ ವೇಳೆ 23 ನಾಯಕರು ಪತ್ರ ಬರೆದು ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರಸ್ತಾಪಿಸಿದ್ದು ಎಷ್ಟು ಸರಿ..? ದೇಶದಲ್ಲಿ ಕೋವಿಡ್ ಸಮಸ್ಯೆ ಹೆಚ್ಚಿರುವ ಈ ಸಂದರ್ಭದಲ್ಲಿ ಇಂತಹ ಪತ್ರಗಳ ಅಗತ್ಯವೇನಿತ್ತು…? ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ನ ಕೆಲ ಹಿರಿಯ ನಾಯಕರು ಬಿಜೆಪಿ ಜತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಬಿಜೆಪಿ ನಾಯಕರ ಆಣತಿಯಂತೆ ಪತ್ರ ಬರೆದಿದ್ದಾರೆ ಎಂದು ಆರೋಪಿಸಿದರು. ರಾಹುಲ್ ಗಾಂಧಿ ಹೇಳಿಕೆಗೆ ಹಿರಿಯ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಪುರಾತನ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ನಲ್ಲಿ ಹಿರಿಯ ನಾಯಕರ ನಡುವೆಯೇ ಭಿನ್ನಮತ ಭುಗಿಲೆದ್ದಿದ್ದು ರಾಜಕೀಯ ಕೆಸರೆರಚಾಟ ಆರಂಭವಾಗಿದೆ.