
ಕೊರೊನಾ ಸಂಕಷ್ಟದ ಮಧ್ಯೆಯೂ ಸಂಸತ್ತಿನ ಮಳೆಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಇದಕ್ಕಾಗಿ ಸಕಲ ಸಿದ್ಧತೆಯನ್ನು ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 1 ರವರೆಗೆ ಅಧಿವೇಶನ ನಡೆಯಲಿದೆ.
ಅಧಿವೇಶನಕ್ಕೆ ಆಗಮಿಸುವ ಎಲ್ಲ ಸಂಸದರು ಮತ್ತು ಸಿಬ್ಬಂದಿ ವರ್ಗ ಕಡ್ಡಾಯವಾಗಿ ಕೊರೊನಾ ವೈರಸ್ ಪರೀಕ್ಷೆಗೆ ಒಳಪಡಬೇಕಾಗಿದ್ದು, ಇದರ ಮಧ್ಯೆ ಅಧಿವೇಶನ ಆರಂಭಕ್ಕೂ ಮುನ್ನವೇ ಐವರು ಸಂಸದರು ಕೊರೊನಾ ಸೋಂಕಿಗೊಳಗಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ತಪಾಸಣೆಯನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಪಾಲಿಸಲು ತೀರ್ಮಾನಿಸಲಾಗಿದ್ದು, ಅಧಿವೇಶನದ ಹಿನ್ನೆಲೆಯಲ್ಲಿ ಸಂಸತ್ ಭವನದ ಆವರಣವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಅಲ್ಲದೆ ಎಲ್ಲ ಬಾಗಿಲುಗಳಿಗೆ ಸ್ಪರ್ಶ ರಹಿತ ವ್ಯವಸ್ಥೆ ಅಳವಡಿಸಲಾಗಿದೆ.