ಭುವನೇಶ್ವರ್: ವಿಧಾನಸಭೆ ಚುನಾವಣೆ ನಡೆಯುತ್ತಿರುವ ಬಿಹಾರದಲ್ಲಿ ಬಿಜೆಪಿ ಕೊರೋನಾ ಲಸಿಕೆಯನ್ನು ಉಚಿತವಾಗಿ ವಿತರಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.
ವಿರೋಧಪಕ್ಷಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ದೇಶದ ಎಲ್ಲ ಜನರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಘೋಷಿಸಲಾಗಿದೆ. ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಈ ಬಗ್ಗೆ ಮಾತನಾಡಿ, ಎಲ್ಲ ಜನರಿಗೆ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರತಿ ವ್ಯಕ್ತಿಗೆ ಲಸಿಕೆ ಹಾಕಲು 500 ರೂಪಾಯಿ ಖರ್ಚು ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬಿಜೆಪಿ ಚುನಾವಣೆ ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಭರವಸೆ ನೀಡಿದ ನಂತರ ಸಾಂಕ್ರಾಮಿಕ ರೋಗವನ್ನು ರಾಜಕೀಯ ಕಾರಣಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿ ಎನ್.ಡಿ.ಎ. ಸರ್ಕಾರವನ್ನು ಟೀಕಿಸಿದ್ದವು.
ತಮಿಳುನಾಡು, ಮಧ್ಯಪ್ರದೇಶ, ಅಸ್ಸಾಂ ಮತ್ತು ಪುದುಚೇರಿ ಸರ್ಕಾರಗಳು ತಮ್ಮ ರಾಜ್ಯಗಳ ಜನರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡುವುದಾಗಿ ಘೋಷಿಸಿವೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ದೇಶಾದ್ಯಂತ ಎಲ್ಲಾ ನಾಗರಿಕರಿಗೆ ಉಚಿತವಾಗಿ ಲಸಿಕೆ ನೀಡಬೇಕೆಂದು ಒತ್ತಾಯಿಸಿದ್ದಾರೆ.