ಕೊಲ್ಕತ್ತಾ: ಆಘಾತಕಾರಿ ಘಟನೆಯಲ್ಲಿ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಾಂದ್ ಡೆಪ್ಯುಟಿ ಕಲೆಕ್ಟರ್ ದೇಬದತ್ತ ರೇ ಮೃತಪಟ್ಟಿದ್ದಾರೆ.
33 ವರ್ಷದ ದೇಬದತ್ತ ರೇ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಕೋವಿಡ್ ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಹೋಮ್ ಕ್ವಾರಂಟೈನ್ ನಲ್ಲಿ ಇದ್ದರು. ಉಸಿರಾಟ ಸಮಸ್ಯೆ ತೀವ್ರವಾಗಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.
2010 ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿದ್ದ ದೇವದತ್ತ ರೇ ವಿವಿಧೆಡೆ ಕಾರ್ಯನಿರ್ವಹಿಸಿದ್ದರು. ಹೂಗಲಿ ಡೆಪ್ಯುಟಿ ಕಲೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಶ್ರಮಿಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಆಗಮಿಸಿದ ವಲಸೆ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸುವ ಕಾರ್ಯದಲ್ಲಿ ನಿರತರಾಗಿದ್ದ ವೇಳೆ ಅವರಿಗೆ ಕೊರೋನಾ ಸೋಂಕು ತಗುಲಿತ್ತು. ಪತಿ ಮತ್ತು 4 ವರ್ಷದ ಮಗುವನ್ನು ಅವರು ಆಗಲಿದ್ದಾರೆ.
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದು, ಜನರ ಸೇವೆಯಲ್ಲಿ ದೇಬದತ್ತ ಅವರ ತ್ಯಾಗ ಮಾಡಿದ್ದಾರೆ. ಪಶ್ಚಿಮ ಬಂಗಾಳ ಸರ್ಕಾರದ ಪರವಾಗಿ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ದೇಬದತ್ತ ರೇ ಅವರ ನಿಧನದಿಂದ ದುಃಖವಾಗಿದೆ. ಕೊರೋನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು. ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಿದ್ದು, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.