ಚೆನ್ನೈ: ನಾಳೆ ತಮಿಳುನಾಡಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ಭಾರೀ ಅನಾಹುತ ಸೃಷ್ಟಿಸುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯ ಸರ್ಕಾರ ಸಾರ್ವಜನಿಕ ರಜೆ ಘೋಷಣೆ ಮಾಡಿದೆ.
ಈ ಕುರಿತು ಮುಖ್ಯಮಂತ್ರಿ ಪಳನಿಸ್ವಾಮಿ ಆದೇಶ ನೀಡಿದ್ದು, ನಾಳೆ ಬೆಳಿಗ್ಗೆ 9 ಗಂಟೆಗೆ ನಿವಾರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಜನರು ಮನೆಯಿಂದ ಹೊರಗೆ ಬಾರದಂತೆ ಮನವಿ ಮಾಡಿದರು. ಅಲ್ಲದೇ ಬೆಳಿಗ್ಗೆ 10 ಗಂಟೆಯಿಂದ ಸ್ಥಳೀಯ ರೈಲು ಸಂಚಾರ ಕೂಡ ಸ್ಥಗಿತಗೊಳಿಸಲಾಗುತ್ತಿದ್ದು, ಈಗಾಗಲೇ 7 ಜಿಲ್ಲೆಗಳಲ್ಲಿ ಬಸ್ ಸಂಚಾರ ಬಂದ್ ಮಾಡಲಾಗಿದೆ ಎಂದರು.
ನಿವಾರ್ ಚಂಡಮಾರುತ ಗಂಟೆಗೆ 120 ಕಿ.ಮೀ ವೇಗದಲ್ಲಿ ಬೀಸುತ್ತಿದ್ದು, ತಮಿಳುನಾಡು, ಪುದುಚೆರಿಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದ್ದು, ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿದ್ದು, ಕಡಲೂರು, ತಂಜಾವೂರು, ನಾಗಪಟ್ಟಂ, ಪುದುಕೊಟ್ಟಲ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎನ್ ಡಿ ಆರ್ ಎಫ್ ತಂಡಗಳನ್ನು ನಿಯೋಜಿಸಲಾಗಿದೆ.