ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 4 ತಿಂಗಳು ಪೂರೈಸಿರುವ ಹಿನ್ನಲೆಯಲ್ಲಿ ಕಿಸಾನ್ ಮೋರ್ಚಾ ಇಂದು ಭಾರತ್ ಬಂದ್ ಗೆ ಕರೆ ನೀಡಿದ್ದು, ದೇಶದ ಹಲವು ಭಾಗಗಳಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕೇಂದ್ರದ ವಿರುದ್ಧ ಬೀದಿಗಿಳಿದು ಹೋರಾಟ ನಡೆಸುತ್ತಿರುವ ರೈತರು ಪಂಜಾಬ್, ಹರ್ಯಾಣ, ಅಮೃತಸರ, ಅಂಬಾಲಾ, ಫಿರೋಜ್ ಪುರ ಸೇರಿದಂತೆ ಹಲವೆಡೆ 30 ಸ್ಥಳಗಳಲ್ಲಿ ರೈತರು ರೈಲ್ವೆ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಹಲವೆಡೆ ರೈಲ್ವೆ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು, 4 ಶತಾಬ್ದಿ ರೈಲು ಸಂಚಾರವನ್ನೇ ರದ್ದುಗೊಳಿಸಲಾಗಿದೆ.
ಕಠಿಣವಾಗಲಿದೆ ʼಚಾಲನಾ ಪರವಾನಗಿʼ ಪಡೆಯುವ ನಿಯಮ: ಕೇಂದ್ರ ಸಚಿವ ನಿತಿನ್ ಗಡ್ಕರಿಯಿಂದ ಮಹತ್ವದ ಹೇಳಿಕೆ
ಇನ್ನು ದೆಹಲಿಯ ಗಾಜಿಪುರ ಗಡಿಯಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ 9ರಲ್ಲಿ ವಾಹನಗಳನ್ನು ತಡೆದು ರಸ್ತೆ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಸಜ್ಜಾಗಿದ್ದಾರೆ.
ಭಾರತ್ ಬಂದ್ ಗೆ ರಾಜ್ಯದಲ್ಲಿ ಕೂಡ ರಾಜ್ಯ ರೈತ ಸಂಘಟನೆಗಳು, ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಚಿತ್ರದುರ್ಗ, ಕೊಪ್ಪಳ, ಕಲಬುರ್ಗಿ, ರಾಯಚೂರು ಸೇರಿದಂತೆ ಹಲವೆಡೆಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಚಿತ್ರದುರ್ಗ ಹಾಗೂ ಕೊಪ್ಪಳದಲ್ಲಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಂಟಾಗಿದೆ. ಅಲ್ಲದೇ ಕೆಲ ಜಿಲ್ಲೆಗಳಲ್ಲಿ ಬಸ್ ಸಂಚಾರ ರದ್ದುಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಬಸ್ ಗಳಿಲ್ಲದೇ ಪರದಾಡಿದ ಘಟನೆ ಕೂಡ ವರದಿಯಾಗಿದೆ.