ನವದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಭಾರದಲ್ಲಿ ಕಳೆದ 24 ಗಂಟೆಯಲ್ಲಿ 1,68,912 ಜನರಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೇ 904 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೋವಿಡ್ ಕೇಸ್ ಗಳು ಹೆಚ್ಚುತ್ತಿರುವ ರಾಜ್ಯಗಳಲ್ಲಿ ಪರಿಸ್ಥಿತಿ ಪರಿಶೀಲನೆ ನಡೆಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಂಡ ಪ್ರವಾಸ ಕೈಗೊಂಡಿದೆ.
ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳಾದ ಮಹಾರಾಷ್ಟ್ರ, ಪಂಜಾಬ್ ಹಾಗೂ ಛತ್ತೀಸ್ ಘಡದಲ್ಲಿ ಆಸ್ಪತ್ರೆಗಳಲ್ಲಿ ಬೆಡ್ ಕೊರತೆ, ಆರ್ ಟಿ ಪಿ ಸಿ ಆರ್ ಪರೀಕ್ಷೆ ಸಮಸ್ಯೆ, ಲಸಿಕೆ ಕೊರತೆ ಉಂಟಾಗುತ್ತಿದೆ ಎನ್ನಲಾಗಿದೆ. ಹೀಗಾಗಿ ಮೊದಲು ಈ ಮೂರು ರಾಜ್ಯಗಳಿಗೆ ಭೇಟಿ ನೀಡಲಿರುವ ತಜ್ಞರ ತಂಡ ಖುದ್ದು ಪರಿಶೀಲಿಸಿ ಪರಿಸ್ಥಿತಿಯ ವಾಸ್ತವತೆಯನ್ನು ಅರಿಯಲಿದೆ.
ʼಸುಪ್ರೀಂʼ ಸಿಬ್ಬಂದಿಗೆ ಕೊರೊನಾ ಸೋಂಕು: ಮನೆಯಿಂದಲೇ ಕಲಾಪ ನಡೆಸಲು ನ್ಯಾಯಾಧೀಶರ ನಿರ್ಧಾರ
ಈಗಾಗಲೇ ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಲಾಕ್ ಡೌನ್ ಕ್ರಮ ಕೈಗೊಂಡಿದ್ದರೂ ಕೂಡ ಕೋವಿಡ್ ಪ್ರಕರಣ ಶರವೇಗದಲ್ಲಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಗೆ ಮಹಾ ಸಿಎಂ ಉದ್ಧವ್ ಠಾಕ್ರೆ ಚಿಂತನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಇಂದು ನಡೆಯಲಿರುವ ತಜ್ಞರ ಮಹತ್ವದ ಸಭೆಯಲ್ಲಿ ಲಾಕ್ ಡೌನ್ ಬಗ್ಗೆ ನಿರ್ಧರಿಸಲಿದ್ದಾರೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನದ ಮೇರೆಗೆ ಆರೋಗ್ಯ ಇಲಾಖೆಯ ತಜ್ಞರ ತಂಡ ಈ ರಾಜ್ಯಗಳಿಗೆ ಭೇಟಿ ನೀಡುತ್ತಿದೆ.