ಚೆನ್ನೈ: ಮುಂದಿನ 24ಗಂಟೆಯಲ್ಲಿ ನಿವಾರ್ ಚಂಡಮಾರುತ ಅಪ್ಪಳಿಸುವ ಭೀತಿಯಿದ್ದು, ತಮಿಳುನಾಡಿನಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಆತಂಕ ಎದುರಾಗಿದೆ. ಈಗಾಗಲೇ ಹವಾಮಾನ ಇಲಾಖೆ ರಾಜ್ಯಾದ್ಯಂತ ರೆಡ್ ಅಲರ್ಟ್ ಘೋಷಿಸಿದೆ.
ದಕ್ಷಿಣ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಭಾರಿ ಬಿರುಗಾಳಿ ಸೃಷ್ಟಿಯಾಗಿದೆ. ಅದು 24 ಗಂಟೆಯಲ್ಲಿ ಚಂಡಮಾರುತವಾಗಿ ಪರಿವರ್ತನೆಗೊಂಡು ತಮಿಳುನಾಡಿಗೆ ಅಪ್ಪಳಿಸಲಿದೆ. ನಾಗಪಟ್ಟಣಂ, ತಂಜಾವೂರು, ಪುದುಕೊಟ್ಟೈ, ತಿರುವಾರೂರು,ರಾಮನಾಥಪುರಂ ಜಿಲ್ಲೆಗಳಲ್ಲಿ ಚಂಡಮಾರುತದ ಪರಿಣಾಮ ಹೆಚ್ಚಿರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಸಮುದ್ರ ತೀರದಲ್ಲಿ 80ರಿಂದ 100 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.