ನವದೆಹಲಿ: ಕೊರೊನಾ ಸಾಂಕ್ರಾಮಿಕ ರೋಗದ ಬಿಕ್ಕಟ್ಟಿನ ನಡುವೆ ಪ್ರಧಾನಿ ನರೇಂದ್ರ ಮೋದಿ 20,0 50 ಕೋಟಿ ರೂಪಾಯಿಯ ಹೊಸ ಯೋಜನೆಗೆ ಚಾಲನೆ ನೀಡಿದ್ದಾರೆ.
ಅಕ್ಟೋಬರ್ – ನವಂಬರ್ ನಲ್ಲಿ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಬಿಹಾರದಲ್ಲಿ ಮೀನುಗಾರಿಕೆ ಮತ್ತು ಪಶುಸಂಗೋಪನಾ ಕ್ಷೇತ್ರಗಳಿಗೆ ಸಂಬಂಧಿಸಿದ ಹಲವು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ರೈತರ ಆದಾಯ ದ್ವಿಗುಣಗೊಳಿಸುವ ಸರ್ಕಾರದ ಉದ್ದೇಶದ ಭಾಗವಾಗಿ ಮೀನುಗಾರಿಕೆ ಕ್ಷೇತ್ರದಲ್ಲಿ ಉತ್ಪಾದನೆಯನ್ನು ಹೆಚ್ಚಿಸಲು 20,050 ಕೋಟಿ ರೂಪಾಯಿ ವೆಚ್ಚದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
ಬಿಹಾರದಲ್ಲಿ ಮೀನುಗಾರಿಕೆ ಮತ್ತು ಪಶುಸಂಗೋಪನಾ ಕ್ಷೇತ್ರದ ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದು, ಮೊಬೈಲ್ ಆಪ್ ಇ-ಗೋಪಾಲ ಕೂಡ ಬಿಡುಗಡೆ ಮಾಡಲಾಗಿದೆ. ಇದು ರೈತರಿಗೆ ಜಾನುವಾರು ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಒದಗಿಸಲಿದೆ.
ಬಿಹಾರದ ಪೂರ್ನಿಯಾದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ವೀರ್ಯ ಕೇಂದ್ರವನ್ನು ಉದ್ಘಾಟಿಸಲಾಗಿದೆ. ಮಹತ್ವದ ಯೋಜನೆಗೆ ಚಾಲನೆ ನೀಡಿದ ನಂತರ ಜಾನುವಾರು ಮತ್ತು ಮೀನುಗಾರಿಕೆ ಕ್ಷೇತ್ರದಲ್ಲಿ ತೊಡಗಿಕೊಂಡ ರೈತರೊಂದಿಗೆ ಮೋದಿ ಸಂವಹನ ನಡೆಸಿದ್ದಾರೆ. ಆತ್ಮ ನಿರ್ಭರ್ ಭಾರತ್ ಪ್ಯಾಕೇಜ್ ಭಾಗವಾಗಿ 20,050 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.
ಸಮುದ್ರ, ಒಳನಾಡಿನ ಮೀನುಗಾರಿಕೆ, ಮೀನುಗಾರಿಕೆ ಸಂಬಂಧಿತ ಚಟುವಟಿಕೆಗಳಿಗೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಬಳಸಿಕೊಳ್ಳಲಾಗುವುದು. ರೈತರ ಆದಾಯ ದ್ವಿಗುಣಗೊಳಿಸುವ ಉದ್ದೇಶವೂ ಇದೆ ಎಂದು ಹೇಳಿದ್ದಾರೆ.