ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೂ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಸ್ವತಃ ರಾಹುಲ್ ಮಾಹಿತಿ ನೀಡಿದ್ದಾರೆ.
ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ರಾಹುಲ್ ಗಾಂಧಿ, ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಾವು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಹೀಗಾಗಿ ನನ್ನ ಸಂಪರ್ಕಕ್ಕೆ ಬಂದವರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ.
ಸೋಮವಾರವಷ್ಟೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆಗೆ ಒಳಗಾಗಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕು ದಿನೇ ದಿನೇ ತೀವ್ರ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳದಲ್ಲಿ ನಡೆಯಬೇಕಿದ್ದ ತಮ್ಮ ಚುನಾವಣಾ ರ್ಯಾಲಿಯನ್ನು ರದ್ದುಗೊಳಿಸಿದ್ದರು. ಇದೀಗ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕು ಸೌಮ್ಯ ಗುಣಲಕ್ಷಣಗಳನ್ನು ಹೊಂದಿದೆ ಎನ್ನಲಾಗಿದೆ.