
ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ತೇಂದರ್ ಜೈನ್ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದು ಇಂದು ಸಂಜೆ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.
ಕಳೆದ ಒಂದು ವಾರದಿಂದ ಕೊರೋನಾ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿರುವ ಸತ್ಯೇಂದರ್ ಜೈನ್ ಅವರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು ನೆಗೆಟಿವ್ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಅವರನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಸತ್ಯೇಂದರ್ ಜೈನ್ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದ ನಂತರ ಕಳೆದ ಶುಕ್ರವಾರ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲಾಗಿತ್ತು. ಮ್ಯಾಕ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಈಗ ಕೊರೋನಾ ನೆಗೆಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿದೆ. ಶುಕ್ರವಾರದ ನಂತರ ಆಸ್ಪತ್ರೆಯಲ್ಲಿದ್ದ ಸಚಿವರ ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದು ಆಕ್ಸಿಜನ್ ನೀಡಲಾಗಿತ್ತು.