ನವದೆಹಲಿ: ಕೊರೋನಾ ನಿಯಂತ್ರಣಕ್ಕಾಗಿ ಹೇರಲಾಗಿದ್ದ ನಿರ್ಬಂಧಗಳನ್ನು ತೆರವುಗೊಳಿಸುವ ಭಾಗವಾಗಿ ಸೆಪ್ಟೆಂಬರ್ 30 ರಂದು ಅನ್ಲಾಕ್ 5 ಮಾರ್ಗಸೂಚಿ ಹೊರಡಿಸಲಾಗಿತ್ತು.
ಅನ್ಲಾಕ್ 5 ಮಾರ್ಗಸೂಚಿ ನವೆಂಬರ್ 30ರ ವರೆಗೂ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಕೇಂದ್ರ ಸರ್ಕಾರ ಈಗಾಗಲೇ ತಿಳಿಸಿದೆ. ಅದೇ ರೀತಿ, ನವಂಬರ್ 30 ರವರೆಗೆ ಅಂತರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ(ಡಿಜಿಸಿಎ) ಈ ಬಗ್ಗೆ ಮಾಹಿತಿ ನೀಡಿ, ನವೆಂಬರ್ 30 ರ ವರೆಗೆ ಅಂತರಾಷ್ಟ್ರೀಯ ವಿಮಾನ ಸಂಚಾರದ ಮೇಲೆ ನಿರ್ಬಂಧ ಮುಂದುವರೆಯಲಿದೆ. ಕೆಲವೊಂದು ಪ್ರಕರಣಗಳಲ್ಲಿ ನಿಗದಿಯಾದ ವಿಮಾನಗಳನ್ನು ಆಯ್ದ ಮಾರ್ಗಗಳಲ್ಲಿ ಸಂಚರಿಸಲು ಅನುಮತಿ ನೀಡಬಹುದಾಗಿದೆ. ಸರಕು ಸಾಗಣೆಯ ವಿಮಾನಗಳಿಗೆ ನಿರ್ಬಂಧ ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.
ದೇಶದಲ್ಲಿ ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಲಾಕ್ ಡೌನ್ ಜಾರಿ ಮಾಡಿ ಮಾರ್ಚ್ 23 ರಿಂದ ಅಂತರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿದೇಶಗಳಿಂದ ಭಾರತೀಯರನ್ನು ಕರೆತರಲು ವಿಶೇಷ ಅಂತರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.