ನವದೆಹಲಿ: ಮಾಜಿ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕ ಜಸ್ವಂತ್ ಸಿಂಗ್ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಹಿರಿಯ ನಾಯಕನ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ, ಸಂಸದ ಅಶೋಕ್ ಗಸ್ತಿಯನ್ನು ಕಳೆದುಕೊಂಡಿದ್ದ ಬಿಜೆಪಿಗೆ ಈಗ ಹಿರಿಯ ನಾಯಕನನ್ನು ಕಳೆದುಕೊಂಡಿರುವುದು ಇನ್ನಷ್ಟು ಆಘಾತವನ್ನುಂಟು ಮಾಡಿದೆ.
ಜಸ್ವಂತ್ ಸಿಂಗ್ ನಿಧನಕ್ಕೆ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಜಸ್ವಂತ್ ಸಿಂಗ್ ರಾಷ್ಟ್ರಕ್ಕಾಗಿ ಸಲ್ಲಿಸಿದ ಸೇವೆ ಅಪಾರ. ಅವರು ಓರ್ವ ಯೋಧನಾಗಿ, ಬಳಿಕ ರಾಜಕೀಯದ ಮೂಲಕ ಸೇವೆ ಸಲ್ಲಿಸಿದ್ದರು. ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದ ಅವಧಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ಹಣಕಾಸು ಖಾತೆ, ರಕ್ಷಣಾ ಖಾತೆ, ವಿದೇಶಾಂಗ ಖಾತೆಗಳನ್ನು ನಿಭಾಯಿಸಿದ್ದರು. ಜಸ್ವಂತ್ ಸಿಂಗ್ ಅಗಲಿಕೆ ತೀವ್ರ ನೋವುಂಟು ಮಾಡಿದೆ. ಅವರ ಕುಟುಂಬಕ್ಕೆ ದು:ಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.