ಜಮ್ಮು-ಕಾಶ್ಮೀರದಲ್ಲಿ ಎರಡು ತಿಂಗಳಿಗೆ ಸಾಕಾಗುವಷ್ಟು ಅಡುಗೆ ಅನಿಲ ಸಿಲಿಂಡರ್ ಗಳನ್ನು ದಾಸ್ತಾನು ಮಾಡಿ ಇರಿಸಿಕೊಳ್ಳುವಂತೆ ತೈಲ ಕಂಪನಿಗಳಿಗೆ ಸರ್ಕಾರ ಸೂಚಿಸಿದ್ದು, ಇದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.
ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಇತ್ತೀಚೆಗೆ ಭಾರತೀಯ ಯೋಧರು ಹಾಗೂ ಚೀನಾ ಸೈನಿಕರ ನಡುವೆ ನಡೆದ ಸಂಘರ್ಷದಲ್ಲಿ ನಮ್ಮ 20 ಯೋಧರು ಹುತಾತ್ಮರಾಗಿದ್ದು, ಅಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿರುವ ಮಧ್ಯೆ ಸರ್ಕಾರ, ಈ ಸೂಚನೆ ನೀಡಿರುವುದು ಮಹತ್ವ ಪಡೆದುಕೊಂಡಿದೆ.
4 ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಸಿ. ಮುರ್ಮು ಅವರ ಸಲಹೆಗಾರರಾಗಿರುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ನಿರ್ದೇಶಕರು ತೈಲ ಕಂಪನಿಗಳಿಗೆ ಅಡುಗೆ ಅನಿಲ ಸಿಲಿಂಡರ್ ದಾಸ್ತಾನು ಮಾಡಿಕೊಳ್ಳಲು ಸೂಚನೆ ನೀಡಿದ್ದು, ಇದರ ಮಧ್ಯೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಈಗ ಇಂಥ ಸೂಚನೆಯ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.