ಕೊರೊನಾ ಲಸಿಕೆ ಪ್ರಕ್ರಿಯೆ ಮುಂದುವರೆದಿದೆ. 50 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ಹಾಕುವ ಪ್ರಕ್ರಿಯೆ ಮಾರ್ಚ್ ಎರಡನೇ ಅಥವಾ ಮೂರನೇ ವಾರದಿಂದ ಪ್ರಾರಂಭವಾಗಬಹುದು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷ್ ವರ್ಧನ್ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಪ್ರಶ್ನೆಗೆ ಉತ್ತರಿಸಿದ ಡಾ.ಹರ್ಷವರ್ಧನ್, ಕೋವಿಡ್ -19 ರ ಎರಡು ಲಸಿಕೆಗಳ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದೆ ಎಂದ್ರು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ 2021 ಜನವರಿ 16 ರಂದು ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನವನ್ನು ಪ್ರಾರಂಭಿಸಲಾಗಿದೆ, ದೇಶದಲ್ಲಿ ಈವರೆಗೆ 50 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.
ಪ್ರಸ್ತುತ ಏಳು ಲಸಿಕೆಗಳ ಕೆಲಸ ನಡೆಯುತ್ತಿದೆ. ಮೂರು ಲಸಿಕೆಗಳು ಕ್ಲಿನಿಕಲ್ ಪ್ರಯೋಗದ ಮೂರನೇ ಹಂತದಲ್ಲಿವೆ. ಎರಡು ಲಸಿಕೆಗಳು ಪ್ರಯೋಗದ ಮೊದಲ ಮತ್ತು ಎರಡನೇ ಹಂತದಲ್ಲಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನದ ಅಡಿಯಲ್ಲಿ, ಒಂದು ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕುವ ಗುರಿಯನ್ನು ಮೊದಲ ಹಂತದಲ್ಲಿ ನಿಗದಿಪಡಿಸಲಾಗಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.
ಅಂದಾಜು ಮೂರು ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಸಿಬ್ಬಂದಿಗೆ ಲಸಿಕೆ ಹಾಕಲು ಅಂದಾಜು 480 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.