ಲಖ್ನೋ: ಉತ್ತರಪ್ರದೇಶದ ಹತ್ರಾಸ್ ನಲ್ಲಿ ನಡೆದ ಘಟನೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತೀವ್ರವಾಗಿ ಖಂಡಿಸಿದ್ದು ಉತ್ತರಪ್ರದೇಶದಲ್ಲಿ ಎಲ್ಲಾ ಮಹಿಳೆಯರ ಸುರಕ್ಷತೆಗಾಗಿ ಕಾಂಗ್ರೆಸ್ ಪಕ್ಷ ಹೋರಾಟ ನಡೆಸಲಿದೆ ಎಂದು ಹೇಳಿದ್ದಾರೆ.
ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ 19 ವರ್ಷದ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ಜವಾಬ್ದಾರಿಯನ್ನು ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ವಹಿಸಿಕೊಳ್ಳಬೇಕು. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸಾಂತ್ವನ ಹೇಳಲು ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು ಹೊರಟಿದ್ದ ನಮಗೆ ಅಡ್ಡಿಪಡಿಸಲಾಗಿದೆ. ಸಿಎಂ ಯೋಗಿ ಆದಿತ್ಯನಾಥ್ ಮಹಿಳೆಯರ ಸುರಕ್ಷತೆಯ ಬಗ್ಗೆ ಕ್ರಮ ಕೈಗೊಳ್ಳಬೇಕು. ಅಲ್ಲಿಯವರೆಗೂ ಹೋರಾಟ ಮುಂದುವರೆಯಲಿದೆ. ಉತ್ತರಪ್ರದೇಶದಲ್ಲಿ ಪ್ರತಿದಿನದ ಇಂತಹ ಘಟನೆಗಳು ಮರುಕಳಿಸುತ್ತಿದ್ದು ಸರ್ಕಾರ ಕಠಿಣ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಪ್ರಿಯಾಂಕ ಗಾಂಧಿ ಆರೋಪಿಸಿದ್ದಾರೆ.
ಹಿಂದೂ ಧರ್ಮದ ರಕ್ಷಕರು ಎಂದು ಹೇಳಿಕೊಳ್ಳುವ ನೀವು ಸಂತ್ರಸ್ತೆಯ ಮೃತದೇಹವನ್ನು ಗೌರವದಿಂದ ಅಂತ್ಯಸಂಸ್ಕಾರ ಮಾಡಲು ಕುಟುಂಬಕ್ಕೆ ಅವಕಾಶವನ್ನೇ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಘಟನೆ ನಡೆದಿರುವುದೇ ದೊಡ್ಡ ಅನ್ಯಾಯವಾಗಿದ್ದು ನಂತರದಲ್ಲಿ ಉತ್ತರಪ್ರದೇಶ ಸರ್ಕಾರ ಕೂಡ ಅನ್ಯಾಯವೆಸಗಿದೆ ಎಂದು ಆರೋಪಿಸಿದ್ದಾರೆ.