ಚೆನ್ನೈ: ಒಬಿಸಿ ಮೀಸಲಾತಿಗೆ ಸಂಬಂಧಿಸಿದಂತೆ ಸಮಿತಿ ರಚಿಸಲು ಮದ್ರಾಸ್ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಅಖಿಲ ಭಾರತೀಯ ಕೋಟಾದ ಅಡಿಯಲ್ಲಿ ವೈದ್ಯಕೀಯ ಶಿಕ್ಷಣ ಪ್ರವೇಶ ಪ್ರಕ್ರಿಯೆಯಲ್ಲಿ ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮೀಸಲಾತಿ ಕಲ್ಪಿಸುವ ಕುರಿತಾಗಿ ತೀರ್ಮಾನ ಕೈಗೊಳ್ಳಲು ಉನ್ನತಮಟ್ಟದ ಸಮಿತಿ ರಚಿಸಬೇಕೆಂದು ಮದ್ರಾಸ್ ಹೈಕೋರ್ಟ್ ಸೂಚಿಸಿದೆ.
ಕೇಂದ್ರ ಸರ್ಕಾರ, ರಾಜ್ಯ ಮತ್ತು ಭಾರತೀಯ ವೈದ್ಯಕೀಯ ಮಂಡಳಿ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯನ್ನು 3ತಿಂಗಳೊಳಗೆ ರಚಿಸುವಂತೆ ಕೋರ್ಟ್ ಸೂಚನೆ ನೀಡಿದೆ. ಈ ಸಮಿತಿ ನೀಡಲಿರುವ ತೀರ್ಮಾನಗಳು ಮುಂದಿನ ಶೈಕ್ಷಣಿಕ ವರ್ಷದಿಂದ ಅನ್ವಯವಾಗುತ್ತದೆ ಎಂದು ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿಗಳಾದ ಎ.ಪಿ. ಸಾಹಿ ಮತ್ತು ಸೆಂಥಿಲ್ ಕುಮಾರ್ ರಾಮಮೂರ್ತಿ ಅವರನ್ನೊಳಗೊಂಡ ವಿಭಾಗೀಯ ಪೀಠ ತಿಳಿಸಿದೆ.
ವೈದ್ಯಕೀಯ ಶಿಕ್ಷಣ ಪ್ರವೇಶ ಬಯಸುವ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಅಖಿಲ ಭಾರತ ಕೋಟಾದಡಿ ಮೀಸಲಾತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ತಮಿಳುನಾಡಿನ ಎಐಎಡಿಎಂಕೆ, ಡಿಎಂಕೆ, ಪಿಎಂಕೆ ಮತ್ತಿತರ ಪಕ್ಷಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.