ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದ ಖ್ಯಾತ ನಟಿ ಖುಷ್ಬೂ ಸುಂದರ್ ಅವರನ್ನು ಬಂಧಿಸಲಾಗಿದೆ. ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಸಿಕೆ ನಾಯಕ ಥೋಲ್ ತಿರುಮಾವಾಲವನ್ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಚಿದಂಬರಂಗೆ ತೆರಳುತ್ತಿದ್ದ ಸಂದರ್ಭದಲ್ಲಿ ಚೆನ್ನೈ ಹೊರವಲಯದಲ್ಲಿರುವ ಮುತ್ತುಕಾಡು ಬಳಿ ಅವರನ್ನು ಮಂಗಳವಾರ ಬೆಳಿಗ್ಗೆ ಬಂಧಿಸಲಾಗಿದೆ.
ತಮ್ಮ ಬಂಧನದ ಬಳಿಕ ಟ್ವೀಟ್ ಮಾಡಿರುವ ಖುಷ್ಬೂ, ನನ್ನ ಪ್ರಯಾಣಕ್ಕೆ ಅವಕಾಶ ನೀಡದೇ ಹಕ್ಕು ಕಸಿದುಕೊಳ್ಳಲಾಗಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಪ್ರಜಾಪ್ರಭುತ್ವದಲ್ಲಿ ಅವಕಾಶವಿಲ್ಲವೇ? ಹಕ್ಕನ್ನು ಕಸಿದುಕೊಳ್ಳಲಾಗಿದೆ. ಈ ಬಗ್ಗೆ ತಮಿಳುನಾಡು ಸಿಎಂ ಮತ್ತು ಎಐಎಡಿಎಂಕೆ ನಾಯಕರು ಸ್ಪಷ್ಟನೆ ನೀಡಬೇಕು ಎಂದು ಹೇಳಿದ್ದಾರೆ.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ.ಟಿ. ರಾಘವನ್ ಅವರನ್ನು ಟಿಂಡಿವನಂ ಟೋಲ್ ಗೇಟ್ ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದರು. ಕಾನೂನು ಮತ್ತು ಸುವ್ಯವಸ್ಥೆಗೆ ಸಮಸ್ಯೆಯಾಗಲಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಅವರನ್ನು ವಶಕ್ಕೆ ಪಡೆಯಲಾಗಿದೆ.
ಚಿದಂಬರಂ ಕ್ಷೇತ್ರದ ಸಂಸದ, ವಿಸಿಕೆ ನಾಯಕ ಥೋಲ್ ತಿರುಮಾವಾಲವನ್ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ತಿರುಮಾವಾಲವನ್ ಅವರನ್ನು ಬೆಂಬಲಿಸಿದ ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ವಿರುದ್ಧವೂ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ರಾಜ್ಯ ಘಟಕ ಘೋಷಿಸಿತ್ತು.