ತಮಿಳುನಾಡು ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಖ್ಯಾತ ನಟ ಕಮಲ್ ಹಾಸನ್ ಈಗಾಗಲೇ ಹೊಸ ಪಕ್ಷ ಸ್ಥಾಪಿಸಿದ್ದು ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವ ಉತ್ಸಾಹದಲ್ಲಿದ್ದಾರೆ. ಇದರ ಮಧ್ಯೆ ಹೊಸ ಪಕ್ಷ ಸ್ಥಾಪಿಸುವ ಇಂಗಿತ ವ್ಯಕ್ತಪಡಿಸಿದ್ದ ಮತ್ತೊಬ್ಬ ಖ್ಯಾತ ನಟ ರಜನಿಕಾಂತ್ ಅನಾರೋಗ್ಯದ ಕಾರಣ ಹೇಳಿ ಇದರಿಂದ ಹಿಂದೆ ಸರಿದಿದ್ದಾರೆ.
ಬಿಜೆಪಿ ಆಡಳಿತರೂಢ ಎಐಎಡಿಎಂಕೆ ಜತೆ ಮೈತ್ರಿ ಮಾಡಿಕೊಳ್ಳುವ ಉತ್ಸಾಹದಲ್ಲಿದ್ದರೂ ಸಹ ಎಐಎಡಿಎಂಕೆ ನಾಯಕರು ಮೈತ್ರಿಗೆ ಮುನ್ನವೇ ಹಲವು ಷರತ್ತುಗಳನ್ನು ಇಡುತ್ತಿದ್ದಾರೆ. ಇದು ರಾಷ್ಟ್ರೀಯ ಪಕ್ಷ ಬಿಜೆಪಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹೀಗಾಗಿ ಇತರೆ ಪಕ್ಷಗಳ ಹಲವು ನಾಯಕರನ್ನು ತನ್ನತ್ತ ಸೆಳೆಯಲು ಬಿಜೆಪಿ ಮುಂದಾಗಿದ್ದು, ಈಗಾಗಲೇ ಕಾಂಗ್ರೆಸ್ ನಾಯಕಿ ಖುಷ್ಬೂ ಸುಂದರ್ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಇದರ ಜೊತೆಗೆ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಡಿಎಂಕೆ ಪಕ್ಷದ ಉಚ್ಚಾಟಿತ ನಾಯಕ ಎಂ.ಕೆ. ಅಳಗಿರಿ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಕುತೂಹಲ ಮೂಡಿದೆ. ಮಧುರೈನಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿರುವ ಅವರು ಸದ್ಯದಲ್ಲೇ ನಾನು ಮಹತ್ವದ ರಾಜಕೀಯ ನಿರ್ಧಾರ ಕೈಗೊಳ್ಳಲಿದ್ದು, ಇದನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ ಡಿಎಂಕೆ ಮುಖ್ಯಸ್ಥ ಹಾಗೂ ತಮ್ಮ ಸಹೋದರ ಎಂ.ಕೆ. ಸ್ಟಾಲಿನ್ ಯಾವುದೇ ಕಾರಣಕ್ಕೂ ತಮಿಳುನಾಡಿನ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಹೇಳಿದ್ದಾರೆ.