alex Certify BIG NEWS: ಶಿಕ್ಷಣ ಸಂಸ್ಥೆಗಳ 50 ಮೀಟರ್‌ ವ್ಯಾಪ್ತಿಯಲ್ಲಿ ಜಂಕ್‌ ಫುಡ್‌ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಿಕ್ಷಣ ಸಂಸ್ಥೆಗಳ 50 ಮೀಟರ್‌ ವ್ಯಾಪ್ತಿಯಲ್ಲಿ ಜಂಕ್‌ ಫುಡ್‌ ನಿಷೇಧ

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಮಹತ್ವದ ತೀರ್ಮಾನ ಕೈಗೊಂಡಿದೆ. ಶಾಲೆಗಳು, ವಿದ್ಯಾರ್ಥಿಗಳ ಹಾಸ್ಟೆಲ್ ಮತ್ತು ಶಿಕ್ಷಣ ಸಂಸ್ಥೆಗಳ ಕ್ಯಾಂಟೀನ್‌ ಗಳಲ್ಲಿ ಜಂಕ್‌ ಫುಡ್‌ ಮತ್ತು ಅನಾರೋಗ್ಯಕರ ತಿನಿಸುಗಳ ಮಾರಾಟದ ಮೇಲೆ ನಿಷೇಧ ಹೇರಿದ್ದು, ಜೊತೆಗೆ ಶಿಕ್ಷಣ ಸಂಸ್ಥೆಗಳ 50 ಮೀಟರ್‌ ವ್ಯಾಪ್ತಿಯಲ್ಲಿ ಇವುಗಳ ಮಾರಾಟ ಮತ್ತು ಜಾಹೀರಾತುಗಳನ್ನು ಪ್ರಚಾರ ಮಾಡದಂತೆ ತಾಕೀತು ಮಾಡಿದೆ.

ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅರುಣ್‌ ಸಿಂಘಾಲ್‌ ಈ ಕುರಿತು ಆದೇಶ ಹೊರಡಿಸಿದ್ದು, ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಹಾಗೂ ಆರೋಗ್ಯಕರ ಆಹಾರ ದೊರೆಯಲೆಂಬ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೆಚ್ಚಿನ ಕೊಬ್ಬು, ಉಪ್ಪು ಹಾಗೂ ಸಕ್ಕರೆ ಅಂಶಗಳನ್ನು ಹೊಂದಿರುವ ಆಹಾರ ಪದಾರ್ಥಗಳಿಗೆ ಕಡಿವಾಣ ಹಾಕಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.‌

2015 ರಲ್ಲಿ ದೆಹಲಿ ಹೈಕೋರ್ಟ್‌ ನೀಡಿದ್ದ ಸೂಚನೆಯಂತೆ ಶಾಲಾ ಮಕ್ಕಳ ಆಹಾರ ಕುರಿತಂತೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಸಮಿತಿಯೊಂದನ್ನು ರಚಿಸಿದ್ದು, ಈ ಸಮಿತಿ ನೀಡಿದ್ದ ತೀರ್ಮಾನಗಳನ್ವಯ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ಪೂರೈಸುವ ಗುತ್ತಿಗೆದಾರರು ಕಡ್ಡಾಯವಾಗಿ ಆಹಾರದ ಗುಣಮಟ್ಟ ಕುರಿತಂತೆ ಸಂಬಂಧಪಟ್ಟ ಪ್ರಾಧಿಕಾರದಿಂದ ಕಾಲಕಾಲಕ್ಕೆ ಪರವಾನಿಗೆ ಪಡೆದುಕೊಳ್ಳುವುದು ಅವಶ್ಯಕವಾಗಿದೆ.

ಶಾಲೆ -‌ ಹಾಸ್ಟೆಲ್‌ ಗಳಲ್ಲಿ ಕಾರ್ಯ ನಿರ್ವಹಿಸುವ ಕ್ಯಾಂಟೀನ್, ಮೆಸ್‌, ಕಿಚನ್‌ ಸಹ ಪ್ರಾಧಿಕಾರದಿಂದ ಲೈಸೆನ್ಸ್‌ ಪಡೆದುಕೊಳ್ಳುವುದು ಕಡ್ಡಾಯವಾಗಿದೆ. ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಆಹಾರದ ಗುಣಮಟ್ಟದ ಕುರಿತಂತೆ ಕಾಲಕಾಲಕ್ಕೆ ತಪಾಸಣೆ ಮಾಡಲು ಸೂಚಿಸಲಾಗಿದೆ. ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಹಾಗೂ ಆರೋಗ್ಯಕರ ಆಹಾರ ಪದಾರ್ಥಗಳು ಸೇವಿಸಲು ಅನುವಾಗುವಂತೆ ಇಂತಹ ಒಂದು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...