ನವದೆಹಲಿ: ಕೇಂದ್ರಾಡಳಿತ ಪ್ರದೇಶಗಳಾಗಿರುವ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ನಲ್ಲಿ ಜಾಗ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಹೊರಗಿನವರು ಕೂಡ ಜಮೀನು ಖರೀದಿಸಬಹುದಾಗಿದೆ. ಕೇಂದ್ರ ಸರ್ಕಾರದಿಂದ ಕಾಯ್ದೆ ಪರಿಷ್ಕರಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ 370 ನೇ ವಿಧಿ ರದ್ದು ಪಡಿಸಿದ 14 ತಿಂಗಳ ನಂತರ ಈ ಅಧಿಸೂಚನೆ ಹೊರಡಿಸಲಾಗಿದೆ.
ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದ ರೀತಿಯಲ್ಲಿ ಭಾರತೀಯರು ಜಾಗ ಖರೀದಿಸಬಹುದು. ಇದರಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮೂಲಸೌಕರ್ಯ ಹೆಚ್ಚಳವಾಗಲಿದ್ದು, ಆರ್ಥಿಕ ಪ್ರಗತಿಗೆ ಸಹಕಾರಿಯಾಗುತ್ತದೆ ಎಂದು ಹೇಳಲಾಗಿದೆ.
ಸರ್ಕಾರದ ಅಧಿಸೂಚನೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ. ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಇದನ್ನು ವಿರೋಧಿಸಿದ್ದು ಜಮ್ಮು ಮತ್ತು ಕಾಶ್ಮೀರ ಮಾರಾಟಕ್ಕಿಡಲಾಗಿದೆ ಎಂದು ಆರೋಪಿಸಿದ್ದಾರೆ.