ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ವಾರಾಂತ್ಯ ಮತ್ತು ಸಾರ್ವಜನಿಕ ರಜಾ ದಿನಗಳಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಆದೇಶಿಸಿದ್ದಾರೆ.
ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ. ವೈದ್ಯಕೀಯ ಸಿಬ್ಬಂದಿ ಮತ್ತು ಅಗತ್ಯ ಸೇವಾ ಪೂರೈಕೆದಾರರನ್ನು ಹೊರತುಪಡಿಸಿ ಎಲ್ಲ ನಾಗರಿಕರು ವೀಕೆಂಡ್ ಮತ್ತು ಸಾರ್ವಜನಿಕರಿಗೆ ರಜಾ ದಿನಗಳಲ್ಲಿ ಓಡಾಡಲು ನಿರ್ಬಂಧ ಇರುತ್ತದೆ. ಅಗತ್ಯ ಕೆಲಸಗಳಿಗಾಗಿ ಓಡಾಡುವವರು COVA ಅಪ್ಲಿಕೇಶನ್ ನಿಂದ ಪಾಸ್ ಗಳನ್ನು ಪಡೆದುಕೊಳ್ಳಬೇಕಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಕೊರೋನಾ ಸಾಂಕ್ರಾಮಿಕ ರೋಗ ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು, ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ವಾರಾಂತ್ಯ ಮತ್ತು ಸಾರ್ವಜನಿಕ ರಜಾ ದಿನಗಳಲ್ಲಿ ಕಠಿಣ ಲಾಕ್ ಡೌನ್ ಜಾರಿಗೆ ಆದೇಶಿಸಿದ್ದಾರೆ. ಹೀಗಿದ್ದರೂ ಕೂಡ ಕೈಗಾರಿಕೆಗಳಲ್ಲಿ ಸಾಮಾನ್ಯವಾಗಿ ಎಂದಿನಂತೆ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಜನ ಸಮೂಹ ಸೇರುವುದನ್ನು ತಡೆಗಟ್ಟುವ ಉದ್ದೇಶದಿಂದ ಕಠಿಣ ಲಾಕ್ ಡೌನ್ ಜಾರಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಹೊರಗಿನಿಂದ ಬರುವ ಅನೇಕರು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಅಂಥವರ ಬಗ್ಗೆ ನಿಗಾವಹಿಸಿ ಕಠಿಣ ಕ್ರಮಕೈಗೊಳ್ಳಬೇಕು. ಹೊರಗಿನಿಂದ ಬಂದವರನ್ನು ಒಂದು ವಾರದ ನಂತರ ಪರೀಕ್ಷಿಸಬೇಕು. ಈ ಅವಧಿಯಲ್ಲಿ ಅವರ ಮನೆಯಲ್ಲೇ ಕ್ವಾರಂಟೈನ್ ನಲ್ಲಿರಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.