ಚೆನ್ನೈ: ಗಾನ ಸಾಮ್ರಾಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಇಂದು ಅವರ ರೆಡ್ ಹಿಲ್ ಫಾರ್ಮ್ ಹೌಸ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ.
ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ತಾವರೈಪಾಕಂ ನಿವಾಸದಲ್ಲಿ ಎಸ್.ಪಿ.ಬಿ. ಪಾರ್ಥೀವ ಶರೀರವನ್ನು ಗಣ್ಯರ ಹಾಗೂ ಸಾರ್ವಜನಿಕ ಅಂತಿಮ ದರ್ಶನಕ್ಕಾಗಿ ಇರಿಸಲಾಗಿದ್ದು, ಬೆಳಿಗ್ಗೆ 7 ಗಂಟೆಯಿಂದ 11 ಗಂಟೆವರೆಗೂ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಬೆಳ್ಳಂಬೆಳಿಗ್ಗೆಯೇ ಎಸ್.ಪಿ.ಬಿ. ಮನೆಯತ್ತ ಸಾವಿರಾರು ಅಭಿಮಾನಿಗಳು ಆಗಮಿಸಿ, ಸ್ವರ ಸಾಮ್ರಾಟನ ಅಂತಿಮ ದರ್ಶನ ಪಡೆಯುತ್ತಿದ್ದಾರೆ.
11 ಗಂಟೆ ಬಳಿಕ ಎಸ್.ಪಿ.ಬಿ. ಅಂತ್ಯಕ್ರಿಯೆಯ ಅಂತಿಮ ವಿಧಿವಿಧಾನಗಳು ಆರಂಭವಾಗಲಿವೆ. ತೆಲುಗು ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಅಂತಿಮ ವಿಧಿವಿಧಾನಗಳನ್ನು ನಡೆಸಲು ಕುಟುಂಬದವರು ನಿರ್ಧರಿಸಿದ್ದು, ಈಗಾಗಲೇ ಹೈದರಾಬಾದ್ ನಿಂದ ಪುರೋಹಿತರು ಚೆನ್ನೈನತ್ತ ಪ್ರಯಾಣ ಬೆಳೆಸಿದ್ದಾರೆ.
ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಂಜೆ ರೆಡ್ ಹಿಲ್ ಫಾರ್ಮ್ ಹೌಸ್ ನಲ್ಲಿ ನಡೆಯಲಿರುವ ಎಸ್.ಪಿ.ಬಿ. ಅಂತ್ಯಕ್ರಿಯೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಎಲ್ಲರಿಗೂ ಮಾಸ್ಕ್ ವಿತರಣೆ ಮಾಡಲಾಗುತ್ತದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವವರು ದೈಹಿಕ ಅಂತರ ಕಾಯ್ದುಕೊಳ್ಳುವಂತೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ತಿರುವಳ್ಳೂರು ಪೊಲೀಸ್ ವರಿಷ್ಠಾಧಿಕಾರಿ ಅರವಿಂದನ್ ತಿಳಿಸಿದ್ದಾರೆ.