ನವದೆಹಲಿ: ದೇಶದ ಅನೇಕ ರಾಜ್ಯಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಮುಂಬೈ ಮಹಾನಗರದಲ್ಲಿ ಮಳೆಯಿಂದಾಗಿ ಜನ ತತ್ತರಿಸಿಹೋಗಿದ್ದಾರೆ. ಮುಂಬೈನಲ್ಲಿ ಮಳೆ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಅದೇ ರೀತಿ ಉತ್ತರಾಖಂಡ್, ಹಿಮಾಚಲಪ್ರದೇಶ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯಪ್ರದೇಶ, ಬಿಹಾರ ಮತ್ತು ಕರ್ನಾಟಕದಲ್ಲಿ ಅತ್ಯಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹರಿಯಾಣ, ದೆಹಲಿ, ಸಿಕ್ಕಿಂ, ಮೇಘಾಲಯ, ಚಂಡೀಗಢ, ಅರುಣಾಚಲ ಪ್ರದೇಶ, ಅಸ್ಸಾಂ ರಾಜ್ಯಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗಲಿದೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದಾಗಿ ಒಡಿಶಾದ ಕೆಲವು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.