ಹೈದರಾಬಾದ್: ತೆಲಂಗಾಣ ರಾಜ್ಯದಲ್ಲಿ ಉಂಟಾದ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ಸಂಕಷ್ಟಕ್ಕೆ ಒಳಗಾದ ಸಂತ್ರಸ್ತರ ಪ್ರತಿ ಕುಟುಂಬಕ್ಕೆ 10 ಸಾವಿರ ರೂ. ನೀಡಲಾಗುವುದು ಎಂದು ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಹೇಳಿದ್ದಾರೆ.
ಮಂಗಳವಾರದಿಂದ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಧನ ವಿತರಣೆ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. ಈ ನಡುವೆ ಹಣಕಾಸು ಇಲಾಖೆ ವತಿಯಿಂದ ಸಂತ್ರಸ್ತರಿಗೆ ವಿತರಿಸಲು ಸ್ಥಳೀಯ ಸಂಸ್ಥೆಗಳ ಪೌರಾಡಳಿತ ಇಲಾಖೆಗೆ 550 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.
ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಸೂಚನೆ ಮೇರೆಗೆ ತಕ್ಷಣ ಹಣಕಾಸು ನೆರವು ನೀಡಲು 550 ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಾಗಿದೆ. ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಕಾರ್ಪೊರೇಟರ್ ಗಳು, ಎಲ್ಲಾ ಸಚಿವರು, ಶಾಸಕರು ಮತ್ತು ಟಿಆರ್ಎಸ್ ಪಕ್ಷದ ಕಾರ್ಯಕರ್ತರು ಸಂತ್ರಸ್ತರ ಕುಟುಂಬಗಳನ್ನು ಗುರುತಿಸಿ ಅವರಿಗೆ ಆರ್ಥಿಕ ನೆರವು ನೀಡಲಾಗಿದೆಯೇ ಎಂಬುದನ್ನು ಖಚಿತ ಪಡಿಸಿಕೊಳ್ಳುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ.