
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಾಧೂರಾ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ಮೂವರು ಉಗ್ರರನ್ನು ಹತ್ಯೆಗೈದಿದೆ.
ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಘಟನೆಯಲ್ಲಿ ಮೂವರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಕಾರ್ಯಾಚರಣೆ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದೆ.
ಸ್ಥಳದಲ್ಲಿ ಉಗ್ರರು ಅವಿತಿರುವ ಮಾಹಿತಿ ಪಡೆದ ಭದ್ರತಾಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಗುಂಡಿನ ದಾಳಿ ನಡೆದಿದೆ. ದಾಳಿಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧ ಹುತಾತ್ಮರಾಗಿದ್ದಾರೆ.
ನಿನ್ನೆಯಷ್ಟೇ ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು. ಶೋಪಿಯಾನ್ ಜಿಲ್ಲೆಯ ಕಿಲೂರಾದಲ್ಲಿ ಓರ್ವ ಭಯೋತ್ಪಾದಕನನ್ನು ಸೆರೆಹಿಡಿಯಲಾಗಿದೆ.