ನವದೆಹಲಿ: ಕೃಷಿ ಮಸೂದೆ, ಭೂ ಸುಧಾರಣೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೂ ಪ್ರತಿಭಟನೆ ನಡೆಯುತ್ತಿದ್ದು, ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರ ಪ್ರತಿಭಟನೆಗಳಿಗೆ ವಿಪಕ್ಷಗಳು ಬೆಂಬಲ ಸೂಚಿಸಿದ್ದು, ಕೃಷಿ ಮಸೂದೆ ವಿರೋಧಿಸಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ರಸ್ತೆ ಮಧ್ಯೆಯೇ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ರಸ್ತೆ ಮಧ್ಯೆಯೇ ಧರಣಿ ನಡೆಸಿ ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.
15-20 ಜನ ಪ್ರತಿಭಟನಾಕಾರರು ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ದೆಹಲಿ ಡಿಸಿಪಿ ತಿಳಿಸಿದ್ದಾರೆ. ಇಂಡಿಯಾ ಗೇಟ್ ಬಳಿಯ ನಡು ರಸ್ತೆಯಲ್ಲೇ ನಡೆದಿರುವ ಈ ಘಟನೆ ಇದೀಗ ವಿವಾದಕ್ಕೆ ಕಾರಣವಾಗಿದೆ.