ಕೊರೊನಾ ವೈರಸ್ ಸೋಂಕು ಮಂದಗತಿಯ ಹಿನ್ನೆಲೆಯಲ್ಲಿ ಡಿಸೆಂಬರ್ 15ರಿಂದ ನಿಗದಿತ ಅಂತಾರಾಷ್ಟ್ರೀಯ ವಿಮಾನಯಾನಗಳ ಸೇವೆಯನ್ನು ಪುನಾರಂಭಿಸಲಿದೆ ಎಂದು ವಿಮಾನಯಾನ ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ.
ಗೃಹ ಸಚಿವಾಲಯ, ವಿದೇಶಾಂಗ ಸಚಿವಾಲಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಗಳೊಂದಿಗೆ ಸಮಾಲೋಚನೆ ನಡೆಸಿ ನಿಗದಿತ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳನ್ನು ಪುನಾರಂಭಿಸಲಾಗುತ್ತದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಭಾರತಕ್ಕೆ ಹಾಗೂ ದೇಶದಿಂದ ನಿಗದಿತ ವಾಣಿಜ್ಯ ಅಂತಾರಾಷ್ಟ್ರೀಯ ಪ್ರಯಾಣಿಕರ ಸೇವೆಗಳನ್ನು ಪುನಾರಂಭಿಸುವ ವಿಷಯವನ್ನು ಗೃಹ ಸಚಿವಾಲಯ, ವಿದೇಶಾಂಗ ಸಚಿವಾಲಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದೊಂದಿಗೆ ಸಮಾಲೋಚನೆ ನಡೆಸಲಾಗಿದೆ. ನಿಗದಿತ ವಾಣಿಜ್ಯ ಅಂತಾರಾಷ್ಟ್ರೀಯ ಪ್ರಯಾಣಿಕರ ಸೇವನೆಯನ್ನು ಡಿಸೆಂಬರ್ 15ರಿಂದ ಆರಂಭಿಸಲಾಗುವುದು ಎಂದು ತಿಳಿಸಲಾಗಿದೆ.
ಈ ವರ್ಷದ ಅಂತ್ಯದ ಒಳಗಾಗಿ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳು ಶೀಘ್ರದಲ್ಲೇ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆ ಇದೆ ಎಂದು ನಾಗರಿಕ ವಿಮಾನಯಾನ ಕಾರ್ಯಧರ್ಶಿ ರಾಜೀವ್ ಬನ್ಸಾರ್ ಹೇಳಿಕೆ ನೀಡಿದ ಎರಡು ದಿನಗಳಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದಿಂದ ಈ ಪ್ರಕಟಣೆಯನ್ನು ಹೊರಡಿಸಲಾಗಿದೆ.
ಕೋವಿಡ್ 19 ಸೋಂಕಿನಿಂದಾಗಿ ಕಳೆದ ವರ್ಷ ಮಾರ್ಚ್ 24ರಿಂದ ದೇಶದಲ್ಲಿ ನಿಗದಿತ ಅಂತಾರಾಷ್ಟ್ರೀಯ ವಿಮಾನಯಾನ ಸೇವೆಗಳು ಸ್ಥಗಿತಗೊಂಡಿದ್ದವು.