ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗಿದೆ ಎನ್ನಲಾದ ಐವಿ ದ್ರಾವಣ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯ ಔಷಧ ನಿಯಂತ್ರಣ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಪಶ್ಚಿಮ ಬಂಗಾಳದ ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್ ಕಂಪನಿ ಪೂರೈಕೆ ಮಾಡಿದ ರಿಂಗರ್ಸ್ ಲ್ಯಾಕ್ಟೇಟ್ ಐವಿ ದ್ರಾವಣ ಪ್ರಮಾಣಿತ ಗುಣಮಟ್ಟ ಹೊಂದಿಲ್ಲದ ಕಾರಣ ಕಂಪನಿ ವಿರುದ್ಧ ಪ್ರಕರಣ ದಾಖಲಿಸುವಂತೆ ಸಚಿವರು ಸೂಚಿಸಿದ್ದಾರೆ.
ರಾಜ್ಯದ ಔಷಧ ನಿಯಂತ್ರಕರು ನಡೆಸಿದ ಪರೀಕ್ಷೆಯಲ್ಲಿ ದ್ರಾವಣದ 22 ಬ್ಯಾಚ್ ಗಳು ಪ್ರಮಾಣಿತ ಗುಣಮಟ್ಟ ಹೊಂದಿಲ್ಲ ಎನ್ನುವ ವರದಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ 13 ಬ್ಯಾಚ್ ಗಳ ವರದಿ ಪ್ರಶ್ನಿಸಿ ಕಂಪನಿಯವರು ಕೇಂದ್ರೀಯ ಔಷಧ ಪ್ರಯೋಗಾಲಯದ ಮೆಟ್ಟಿಲೇರಿದ್ದಾರೆ. ಅವುಗಳಲ್ಲಿ ನಾಲ್ಕು ಬ್ಯಾಚ್ ಗಳು ಗುಣಮಟ್ಟ ಹೊಂದಿವೆ ಎಂದು ಕೇಂದ್ರೀಯ ಔಷಧ ಪ್ರಯೋಗಾಲಯ ವರದಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ಔಷಧ ನಿಯಂತ್ರಣ ಪ್ರಯೋಗಾಲಯ ಪರೀಕ್ಷೆಯಲ್ಲಿ ಪ್ರಮಾಣಿತ ಗುಣಮಟ್ಟ ಹೊಂದಿಲ್ಲ ಎನ್ನುವ ವರದಿ ಬಂದಿದೆ. ಕೇಂದ್ರದ ಔಷಧ ಪ್ರಯೋಗಾಲಯದಲ್ಲಿ ಗುಣಮಟ್ಟ ಹೊಂದಿದೆ ಎಂದು ವರದಿ ಬರಲು ಹೇಗೆ ಸಾಧ್ಯವೆಂದು ಪ್ರಶ್ನಿಸಿದ ಸಚಿವ ದಿನೇಶ್ ಗುಂಡೂರಾವ್, ಈ ಬಗ್ಗೆ ಸಮಗ್ರವಾಗಿ ಪರಿಶೀಲಿಸಿ ವರದಿ ನೀಡುವಂತೆ ರಾಜ್ಯ ಔಷಧ ನಿಯಂತ್ರಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.