ಧಾರವಾಡ: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಪೀಠ ಮದ್ಯಂತರ ತಡೆ ನೀಡಿದೆ.
ಚುನಾವಣೆ ವೇಳೆ ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮತದಾರರ ಮೇಲೆ ಮೋದಿ ಆಶಿರ್ವಾದ ಇರುತ್ತದೆ ಎಂದು ಜೆ.ಪಿ.ನಡ್ಡಾ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜೆ.ಪಿ.ನಡ್ಡಾ ವಿರುದ್ಧ ಮತದಾರರಿಗೆ ಆಮಿಷವೊಡ್ಡಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಚುನಾವಣಾಧಿಕಾರಿ ಲಕ್ಷ್ಮಣ ನಂದಿ ಶಿಗ್ಗಾಂವಿ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು.
ಜೆ.ಪಿ.ನಡ್ಡಾ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠ, ಜೆ.ಪಿ.ನಡ್ಡಾ ಮೇಲಿನ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.