ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ನಾನು ಬಿಜೆಪಿಗೆ ಮರಳಬೇಕು ಎಂಬುದು ಹಲವು ನಾಯಕರ ಅಪೇಕ್ಷೆ ಇತ್ತು. ಅದರಂತೆ ಇಂದು ಅಧಿಕೃತವಾಗಿ ಮರಳಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ ಎಂದು ಶೆಟ್ಟರ್ ತಿಳಿಸಿದ್ದಾರೆ.
ಬಿಜೆಪಿಗೆ ಮರು ಸೇರ್ಪಡೆಯಾದ ಬಳಿಕ ದೆಹಲಿ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ನಾನು ಪಕ್ಷಕ್ಕೆ ವಾಪಾಸ್ ಆಗಬೇಕು ಎಂದು ನಾಯಕರು ಬಯಸಿದ್ದರು. ಅಮಿತ್ ಶಾ ಅವರು ಅತ್ಯಂತ ಗೌರವದಿಂದ ಬರಮಾಡಿಕೊಂಡರು. ನಾನು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸವಾಗಿದೆ ಎಂದು ಹೇಳಿದರು.
ನಾನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ, ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಈ ಮೇಲ್ ಮೂಲಕ ರಾಜೀನಾಮೆ ಪತ್ರ ರವಾನಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೂ ರಾಜೀನಾಮೆ ಪತ್ರ ರವಾನಿಸಿದ್ದೇನೆ ಎಂದು ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಈ ದೇಶದ ಹಿತದೃಷ್ಟಿಯಿಂದ ಒಟ್ಟಾಗಿ ಕೆಲಸ ಮಾಡಬೇಕಿದೆ. ಆ ನಿಟ್ಟಿನಲ್ಲಿ ಪಕ್ಷಕ್ಕೆ ವಾಪಾಸ್ ಆಗಿದ್ದು, ಪಕ್ಷ ನಿಷ್ಠೆಯಿಂದ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.